ಬೆಂಗಳೂರು, ಡಿ. 15 (DaijiworldNews/AK): ಪೊಲೀಸರಿಂದಲೇ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳ ಹೆಚ್ಚಳದ ಹಿನ್ನಲೆ ಬೆಂಗಳೂರು ಸಂಚಾರ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಅವರು ಸಂಚಾರ ನಿಯಮಗಳ ಪಾಲನೆಗೆ ಪೊಲೀಸರು ಪ್ರಾಮುಖ್ಯತೆ ನೀಡಬೇಕು. ಪೊಲೀಸರೇ ಸಂಚಾರ ನಿಯಮಗಳ ಉಲ್ಲಂಘಿಸಿದ್ರೆ ಪ್ರಶ್ನಿಸುವ ನೈತಿಕತೆ ಇರುವುದಿಲ್ಲ ಜೊತೆಗೆ ಸಾರ್ವಜನಿಕರಿಂದ ಟೀಕೆಗಳಿಗೆ ಒಳಗಾಗಬೇಕಾಗುತ್ತದೆ. ಹೀಗಾಗಿ ಸಂಚಾರ ಪೊಲೀಸರಿಂದ ನಿಯಮ ಉಲ್ಲಂಘನೆ ಕಂಡು ಬಂದಲ್ಲಿ ಐಎಂವಿ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ, ಕಾನೂನನ್ನು ಜಾರಿಗೆ ತರುವ ಆರಕ್ಷಕರೇ ಸಂಚಾರ ನಿಯಮಗಳನು ಪಾಲಿಸದೇ ವಾಹನ ಚಾಲನೆ ಮಾಡುತ್ತಿರುವ ಪ್ರಕರಣಗಳು ಕಂಡುಬಂದಿರುತ್ತವೆ. ಇದರಲ್ಲಿ ಪ್ರಮುಖವಾಗಿ ಸೀಟ್ಬೆಲ್ಟ್ ಧರಿಸದೇ ಇರುವುದು ಹಾಗೂ ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಮತ್ತಿತರ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ವರದಿಯಾಗಿವೆ.
ಬೆಂಗಳೂರು ನಗರ ಸಂಚಾರ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ವಾಹನವನ್ನು ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್/ಸೀಟ್ಬೆಲ್ಟ್ ಧರಿಸುವುದರ ಜೊತೆಗೆ ಎಲ್ಲಾ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಸಂಚಾರ ಪೊಲೀಸರಿಂದ ನಿಯಮ ಉಲ್ಲಂಘನೆಗಳು ಕಂಡುಬಂದಲ್ಲಿ ಇಂತಹ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಐಎಂವಿ ಕಾಯ್ದೆ ರೀತ್ಯಾ ಕ್ರಮಕೈಗೊಳ್ಳಲಾಗುವುದೆಂಬ ಸ್ಪಷ್ಟ ಸಂದೇಶವನ್ನು ರವಾನಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.