ಬೆಂಗಳೂರು,ಡಿ. 24 (DaijiworldNews/AK): ರಾಜ್ಯದ ಒಟ್ಟು 4 ಪಟ್ಟಣ ಪಂಚಾಯಿತಿಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಇದು ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯಕ್ಕೆ ಜನರ ಪಾಠ ಮತ್ತು ಬಿಜೆಪಿ ಬಲವರ್ಧನೆಯ ಸ್ಪಷ್ಟ ಸಂಕೇತ ಎಂದು ಅವರು ವಿಶ್ಲೇಷಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸರಕಾರವು ಎಲ್ಲ ರಂಗಗಳಲ್ಲಿ ವಿಫಲವಾಗಿದೆ. ಎಲ್ಲ ವಸ್ತುಗಳ ಬೆಲೆ ಏರಿಕೆ, ಅಭಿವೃದ್ಧಿ ಶೂನ್ಯ ಸ್ಥಿತಿ, ಅತಿಯಾದ ತುಷ್ಟೀಕರಣ, ಎಲ್ಲ ಸರಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ, ರೈತರ ತೀವ್ರ ನಿರ್ಲಕ್ಷ್ಯ, ದಲಿತರಿಗೆ ಮೀಸಲಿಟ್ಟ ಎಸ್ಇಪಿ, ಟಿಎಸ್ಪಿ ಹಣವನ್ನು ದುರುಪಯೋಗ ಮಾಡಿರುವುದು- ಇವೆಲ್ಲವನ್ನು ರಾಜ್ಯದ ಜನರು ಗಮನಿಸಿದ್ದಾರೆ. ಇದು ಜನಾಕ್ರೋಶವಾಗಿ ಪರಿವರ್ತನೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಒಂದೆಡೆ ಪಕ್ಷದೊಳಗಿನ ಕುರ್ಚಿ ಕಾಳಗದಿಂದ ಆಡಳಿತ ನೆಲಕಚ್ಚಿದೆ. ಹಿಂದೂಗಳ ಮೇಲಿನ ದೌರ್ಜನ್ಯ ಮಿತಿ ಮೀರಿದೆ. ಕಾನೂನು- ಸುವ್ಯವಸ್ಥೆಯೂ ಹದಗೆಟ್ಟಿದೆ. ಇದೆಲ್ಲವನ್ನೂ ಪ್ರಜ್ಞಾವಂತ ಮತದಾರರು ಗಮನಿಸಿದ್ದಾರೆ. ಇದು ಬಿಜೆಪಿ ಪರ ಅಲೆಯಾಗಿ ಹೊರಹೊಮ್ಮಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ, ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗಳಲ್ಲೂ ಗೆಲುವಿನ ಓಟವನ್ನು ಮುಂದುವರೆಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮತದಾರರು, ಕಾರ್ಯಕರ್ತರು, ಮುಖಂಡರಿಗೆ ಕೃತಜ್ಞತೆ
ಗೆಲುವಿನ ಕಾರಣಕರ್ತರಾದ ಮತದಾರರು, ಕಾರ್ಯಕರ್ತರು ಮತ್ತು ಮುಖಂಡರನ್ನು ಅವರು ಅಭಿನಂದಿಸಿ ಕೃತಕ್ಞತೆ ಸಲ್ಲಿಸಿದ್ದಾರೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದಿದೆ. ಇದಲ್ಲದೇ ದೊಡ್ಡಬಳ್ಳಾಪುರ ನಗರಸಭೆಯ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ, ಕಿನ್ನಿಗೋಳಿ, ಉತ್ತರ ಕನ್ನಡ ಜಿಲ್ಲೆಯ ಮಂಕಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲೂ ಬಿಜೆಪಿ ಬಹುಮತ ಸಾಧಿಸಿದೆ. ಇದಲ್ಲದೇ ರಾಯಚೂರು ಜಿಲ್ಲೆಯ ತುರ್ವಿಹಾಳದ ಪಟ್ಟಣ ಪಂಚಾಯಿತಿಯ 4ನೇ ವಾರ್ಡ್ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದಾರೆ ಎಂದಿರುವ ಅವರು, ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ.