ಚಿತ್ರದುರ್ಗ, ಡಿ. 25 (DaijiworldNews/AA): ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಗಾಯಾಳುಗಳಿಗೆ ತಲಾ 50,000 ಪರಿಹಾರ ಘೋಷಿಸಿದ್ದಾರೆ.

"ಈ ಅಪಘಾತಕ್ಕೆ ಸಂಬಂಧಿಸಿದಂತೆ ಕಾರಣದ ಬಗ್ಗೆ ಸರಿಯಾದ ತನಿಖೆ ನಡೆಸಬೇಕು. ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ" ಎಂದು ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.
"ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ" ಎಂದು ಎಕ್ಸ್ನಲ್ಲಿ ಈ ಬಗ್ಗೆ ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ.