ಬೆಂಗಳೂರು, ಜು12(Daijiworld News/SS): ಆಡಳಿತ ನಡೆಸಲು ಸರ್ಕಾರಕ್ಕೆ ಅಧಿಕಾರವೇ ಇಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯ ಉಸ್ತುವಾರಿ ಕೆ.ಮುರಳೀಧರ ರಾವ್ ಮತ್ತು ಶಾಸಕ ಕೆ.ಎಸ್.ಈಶ್ವರಪ್ಪ ಅವರನ್ನು ಜೆಡಿಎಸ್ನ ಸಚಿವ ಸಾ.ರಾ.ಮಹೇಶ್ ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿಯಾಗಿದ್ದರು. ಇದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹ, ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ, ಕೋಟ ಶ್ರೀನಿವಾಸ ಪೂಜಾರಿ ಸುದ್ದಿಗಾರರೊಂದಿಗೆ ಮಾತನಾಡಿದರು. ಜೆಡಿಎಸ್ ಮುಖಂಡ ಹಾಗೂ ಸಚಿವ ಸಾ.ರಾ. ಮಹೇಶ್ ಜೊತೆ ಕೆ.ಎಸ್. ಈಶ್ವರಪ್ಪ ಭೇಟಿಯಾಗಿದ್ದು ಸಾಂದರ್ಭಿಕ ಮತ್ತು ಆಕಸ್ಮಿಕ. ಇದಕ್ಕೆ ಯಾವುದೇ ಅರ್ಥ ಕಲ್ಪಿಸಬೇಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜೆಡಿಎಸ್ ಜೊತೆಗೆ ಹೋಗಲು ನಾವು ಮಾನಸಿಕವಾಗಿ ಸಿದ್ಧರಿಲ್ಲ. ರಾಜ್ಯದಲ್ಲಿ ಆಡಳಿತ ನಡೆಸಲು ಸರ್ಕಾರಕ್ಕೆ ಅಧಿಕಾರವೇ ಇಲ್ಲ ಎಂದು ಅವರು ಟೀಕಿಸಿದರು.
ಇತಿಹಾಸದಲ್ಲಿ ಮೊದಲ ಬಾರಿಗೆ ಬಹುಮತವಿಲ್ಲದ ಸರ್ಕಾರವನ್ನು ವಿಪಕ್ಷ ಸದನದಲ್ಲಿ ಎದುರಿಸುತ್ತಿದೆ. ಆಡಳಿತ ನಡೆಸಲು ಸರ್ಕಾರಕ್ಕೆ ಅಧಿಕಾರವೇ ಇಲ್ಲ. ಬಹುಮತ ಇಲ್ಲದ ಕಾರಣ ಅವಿಶ್ವಾಸದ ಪ್ರಶ್ನೆಯೇ ಇಲ್ಲ. ಸಿಎಂ ಕುಮಾರಸ್ವಾಮಿ ರಾಜೀನಾಮೆ ಕೊಡಬೇಕು ಎಂದು ಅವರು ಒತ್ತಾಯಿಸಿದರು.