ಬೆಂಗಳೂರು, ಜು13(Daijiworld News/SS): ರಾಜ್ಯ ರಾಜಕೀಯದಲ್ಲಿ ಇಷ್ಟು ದೊಡ್ಡ ಅಲ್ಲೋಲ ಕಲ್ಲೋಲ ಉಂಟಾಗಿದೆ. ಈ ಸಮಯದಲ್ಲಿ ಮುಖ್ಯಮಂತ್ರಿ ಅವರು ಅಧಿಕಾರದಲ್ಲಿ ಮುಂದುವರಿಯುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ರಾಜಕೀಯ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಕೈಯಲ್ಲಿ ಅಧಿಕಾರವಿದೆ. ಸರ್ಕಾರ ಮತ್ತು ಅಧಿಕಾರವನ್ನು ಅವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ರಾಜ್ಯ ರಾಜಕೀಯದಲ್ಲಿ ಇಷ್ಟು ದೊಡ್ಡ ಅಲ್ಲೋಲ ಕಲ್ಲೋಲ ಉಂಟಾಗಿದೆ. ಈ ಸಮಯದಲ್ಲಿ ಮುಖ್ಯಮಂತ್ರಿ ಅವರು ಅಧಿಕಾರದಲ್ಲಿ ಮುಂದುವರಿಯುವುದು ಸರಿಯಲ್ಲ. ಈ ಅಭಿಪ್ರಾಯ ಅವರಿಂದಲೇ ಬರಬೇಕು ಎಂದು ಹೇಳಿದರು.
ಮುಖ್ಯಮಂತ್ರಿಗಳ ಮೇಲೆ ನಂಬಿಕೆ ಇಲ್ಲ ಎನ್ನುವುದು ಶಾಸಕರು ಸೇರಿದಂತೆ ಇಡೀ ಜಗತ್ತಿಗೆ ಗೊತ್ತು. ಇನ್ನು ಅವರೇ ವಿಶ್ವಾಸ ಮತಯಾಚನೆ ಮಾಡುವುದರಲ್ಲಿ ಅರ್ಥ ಏನಿದೆ..? ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಸರ್ಕಾರ ನಡೆಸಲು ಸಾಧ್ಯವಿಲ್ಲದಿದ್ದರೂ ಮುಖ್ಯಮಂತ್ರಿ ಅವರು ಕಾಲದೂಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.