ಬೆಂಗಳೂರು, ಜು 14 (Daijiworld News/MSP): ಅತೃಪ್ತರ ರಾಜೀನಾಮೆಯಿಂದ ಮೈತ್ರಿ ಸರ್ಕಾರ ಅಲ್ಪ ಮತಕ್ಕೆ ಕುಸಿದಿದ್ದು ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಬೆಂಗಳೂರಿನ ರಮಡ್ ರೆಸಾರ್ಟ್ ಬಳಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸಿಎಂ ಸೋಮವಾರವೇ ವಿಶ್ವಾಸಮತ ಯಾಚನೆ ಸಾಬೀತುಪಡಿಸಬೇಕು, ಇಲ್ಲವಾದಲ್ಲಿ ತಕ್ಷಣವೇ ರಾಜೀನಾಮೆ ನೀಡಲಿ. ಕಾಂಗ್ರೆಸ್ ಶಾಸಕರ ಶತಪ್ರಯತ್ನದ ನಂತರವೂ ಅತೃಪ್ತ ಶಾಸಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಮತ್ತು ಡಾ.ಸುಧಾಕರ್ ಅವರ ಮನವೊಲಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ವಿಫಲರಾಗಿದ್ದಾರೆ. ಇವರಿಬ್ಬರೂ ಸೇರಿ ದೋಸ್ತಿ ಸರ್ಕಾರದ ಕಾರ್ಯವೈಖರಿಯಿಂದ ರೋಸಿ ಹೋಗಿ 15 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ 15 ಶಾಸಕರ ಜೊತೆಗೆ ಸಮ್ಮಿಶ್ರ ಸರ್ಕಾರಕ್ಕೆ ಕೊಟ್ಟಿದ್ದ ಬೆಂಬಲವನ್ನು ವಾಪಸು ಪಡೆದಿರುವ ಪಕ್ಷೇತರ ಶಾಸಕರು ಬಿಜೆಪಿಯನ್ನು ಬೆಂಬಲಿಸುವುದಾಗಿ ರಾಜ್ಯಪಾಲರಿಗೆ ಪತ್ರ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಬಹುಮತ ಕಳೆದುಕೊಂಡಿರುವ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.