ಮೈಸೂರು, ಜು19(Daijiworld News/SS): ಸುಪ್ರೀಂಕೋರ್ಟ್ ನಿರ್ದೇಶನದಂತೆ ಸ್ಪೀಕರ್ ವಿಶ್ವಾಸಮತ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ.
ಎಚ್.ಡಿ. ರೇವಣ್ಣ ಆಷಾಢ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ತಮ್ಮ ಸಹೋದರ ಎಚ್.ಡಿ. ಕುಮಾರಸ್ವಾಮಿ ಹಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ವಿಶ್ವಾಸಮತ ಯಾಚನೆ ಮಾಡಲು 12ನೇ ತಾರೀಖು ರಾಜ್ಯಪಾಲರ ಬಳಿ ಸಮಯ ಕೇಳಿದ್ದರು. ಅಂದು ಸಭೆಗೆ ಬಿಜೆಪಿಯವರು ಬರಲಿಲ್ಲ. ಅವರು ಬರಲಿಲ್ಲ ಎಂದರೆ ನಾವೇನು ಮಾಡೋದು..? ಬಳಿಕ 18ನೇ ತಾರೀಖಿಗೆ ವಿಶ್ವಾಸಮತ ಯಾಚನೆಗೆ ಸಮಯ ನಿಗದಿಯಾಗಿತ್ತು. ಇದೀಗ ಸುಪ್ರೀಂಕೋರ್ಟ್ ನಿರ್ದೇಶನದಂತೆ ಸ್ಪೀಕರ್ ವಿಶ್ವಾಸಮತ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಹೇಳಿದರು.
ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಸ್ಪೀಕರ್ ತೀರ್ಮಾನ ತೆಗೆದುಕೊಳ್ಳುತ್ತಾರೆ. ಈ ಹಿಂದೆ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ವಿಶ್ವಾಸಮತ ಸಾಬೀತುಪಡಿಸಲು 10 ದಿನ ಸಮಯ ತೆಗೆದುಕೊಂಡಿದ್ದರು ಎಂದು ತಿಳಿಸಿದರು.
ಇಂದು ಮಧ್ಯಾಹ್ನ 1.30ರೊಳಿಗೆ ವಿಶ್ವಾಸಮತ ಯಾಚನೆ ಬಗ್ಗೆ ಸ್ಪೀಕರ್ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಇಲ್ಲಿ ಯಾರು ಕಾಲಹರಣ ಮಾಡುತ್ತಿದ್ದಾರೆ ಎಂದು ಜನ ನೋಡುತ್ತಿದ್ದಾರೆ ಎಂದು ರೇವಣ್ಣ ಹೇಳಿದ್ದಾರೆ.