ಬೆಂಗಳೂರು, ಜ. 27 (DaijiworldNews/AA): ರಾಜ್ಯದಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಕೇಂದ್ರ ತನಿಖಾ ದಳ ಅಥವಾ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿ ಅವರಿಂದ ತನಿಖೆಗೆ ಆದೇಶಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ ಆರು ಸಾವಿರ ಕೋಟಿ ರೂಪಾಯಿಗಳ ಹಗರಣ ನಡೆದಿದೆ. ಈ ಹಗರಣದಲ್ಲಿ ಸಚಿವ ಆರ್ ಬಿ. ತಿಮ್ಮಾಪುರ ಮತ್ತು ಅವರ ಕುಟುಂಬಸ್ಥರು ಭಾಗಿಯಾಗಿರುವ ಆರೋಪವಿದೆ. ಆದ್ದರಿಂದ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಹೊಸದಾಗಿ ಮದ್ಯದಂಗಡಿಗಳಿಗೆ ಪರವಾನಗಿ ನೀಡಲು 2 ಕೋಟಿ ರೂಪಾಯಿವರೆಗೂ ಲಂಚದ ಬೇಡಿಕೆ ಇಟ್ಟಿರುವ ಆರೋಪಗಳಿವೆ. ಹೀಗಾಗಿ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಆಡಳಿತ ಪಕ್ಷದ ನಾಯಕರು ಮಹಾತ್ಮ ಗಾಂಧಿ ಅವರ ಅನುಯಾಯಿಗಳೆಂದು ಹೇಳಿಕೊಂಡು ರಾಜ್ಯದಲ್ಲಿ ಹೊಸದಾಗಿ ಮದ್ಯದಂಗಡಿಗಳ ಪ್ರಾರಂಭಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಅಬಕಾರಿ ಇಲಾಖೆಯಲ್ಲಿ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ವಿಡಿಯೋ ತುಣುಕುಗಳು ಸಾಮಾಜಿಕ ಜಾಲಾತಾಣಗಳಲ್ಲಿ ಹರಿದಾಡಿವೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.