ಬೆಂಗಳೂರು, ಜು21(Daijiworld News/SS): ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಸಿಎಂ ಕುಮಾರಸ್ವಾಮಿಗೆ ಇದೀಗ ಭೂ ಸಂಕಷ್ಟ ಬೆನ್ನೇರಿದೆ. ಬೆಂಗಳೂರಿನ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿ ವ್ಯಾಪ್ತಿಯಲ್ಲಿ ನಡೆದಿರುವ 3.34 ಎಕರೆ ಜಮೀನಿನ ಡಿನೋಟಿಫಿಕೇಷನ್ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
2006-07ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಲಗೆವಡೇರಹಳ್ಳಿಯಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಲಾಗಿದೆ ಎಂದು ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ಸಿಎಂ ಸಹಿತ 19 ಆರೋಪಿಗಳಿಗೆ ಮತ್ತೆ ವಿಚಾರಣೆ ಎದುರಿಸುವ ಸವಾಲು ಎದುರಾಗಿದೆ.
ಈ ಪ್ರಕರಣದಲ್ಲಿ ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಎಲ್ಲ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಮರುತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಚಾಮರಾಜನಗರದ ಸಂತೇಮರಹಳ್ಳಿಯ ಆರ್ಟಿಐ ಕಾರ್ಯಕರ್ತ ಎಂ.ಎಸ್. ಮಹದೇವಸ್ವಾಮಿ ಸಲ್ಲಿಸಿದ್ದ ಅರ್ಜಿ ಕುರಿತ ಆದೇಶವನ್ನು ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಪ್ರಕಟಿಸಿದ್ದಾರೆ.
2007ರಲ್ಲಿ ಎಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದ ಅವಧಿಯಲ್ಲಿ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ ಬಿಡಿಎ ಬಡಾವಣೆಗಾಗಿ ವಶಪಡಿಸಿಕೊಂಡಿದ್ದ 3 ಎಕರೆ 34 ಗುಂಟೆ ಜಮೀನನ್ನು ನಿಯಮಬಾಹಿರವಾಗಿ ಡಿನೋಟಿಫೈ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿತ್ತು. ಈ ಸಂಬಂಧ ಎಂ.ಎಸ್. ಮಹದೇವಸ್ವಾಮಿ ಲೋಕಾಯುಕ್ತದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಬಿಡಿಎನಿಂದ ಪರಿಹಾರ ಪಡೆದಿದ್ದ ಅರ್ಜಿದಾರರು, ಡಿನೋಟಿಫಿಕೇಷನ್ ಕೋರಿ ಸಿಎಂ ಕಚೇರಿಗೆ ಅರ್ಜಿ ಸಲ್ಲಿಸಿದ್ದರು.
ಈ ಕುರಿತು ಪರಿಶೀಲನೆ ನಡೆಸುವಂತೆ ನಗರಾಭಿವೃದ್ಧಿ ಇಲಾಖೆ ಮತ್ತು ಬಿಡಿಎ ಸೇರಿದಂತೆ ಸಂಬಂಧಪಟ್ಟ ಸಂಸ್ಥೆಗಳಿಗೆ ಮುಖ್ಯಮಂತ್ರಿ ಕಚೇರಿಯಿಂದ ಅಭಿಪ್ರಾಯ ಕೋರಲಾಗಿತ್ತು. ಅದರಲ್ಲಿ ನೋಟಿಫೈ ಆಗಿರುವ ಜಮೀನನ್ನು ಡಿನೋಟಿಫೈ ಮಾಡಲು ಬರುವುದಿಲ್ಲ ಎಂಬ ಅಭಿಪ್ರಾಯವನ್ನು ಇಲಾಖೆಗಳು ನೀಡಿದ್ದವು. ಹೀಗಿದ್ದರೂ ಕುಮಾರಸ್ವಾಮಿ ತಮ್ಮ ಅಧಿಕಾರ ಬಳಸಿ, ಇಲಾಖೆಗಳ ಅಭಿಪ್ರಾಯಕ್ಕೆ ವಿರುದ್ಧವಾಗಿ ಡಿನೋಟಿಫೈ ಮಾಡಿಕೊಟ್ಟು ನಿಯಮ ಉಲ್ಲಂಘಿಸಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದರು. ದೂರಿನ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯ ತನಿಖೆಗೆ ಆದೇಶಿಸಿತ್ತು. 7 ವರ್ಷಗಳ ಕಾಲ ತನಿಖೆ ನಡೆಸಿದ ಪೊಲೀಸರು, 2019ರ ಜನವರಿ ತಿಂಗಳಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ದೂರುದಾರ ಮಹದೇವಸ್ವಾಮಿ ಆಕ್ಷೇಪಿಸಿದ್ದರು.