ಬೆಂಗಳೂರು, ಜು24(Daijiworld News/SS): ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ವಂಚನೆ ಪ್ರಕರಣದ ಕಿಂಗ್ ಪಿನ್ ಮನ್ಸೂರ್ ಖಾನ್'ನನ್ನು ಕೋರ್ಟ್ ಮತ್ತೆ ಮೂರು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ.
ಐಎಂಎ (ಐ ಮಾನಿಟರಿ ಅಡ್ವೈಸರಿ) ಸಮೂಹ ಕಂಪನಿ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮೊಹಮದ್ ಮನ್ಸೂರ್ ಖಾನ್ ಅವರನ್ನು ಇದೇ 26ರವರೆಗೆ ಜಾರಿ ನಿರ್ದೇಶನಾಲಯದ(ಇ.ಡಿ) ತನಿಖಾಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ. ಈಗಾಗಲೇ ಮೂರು ದಿನಗಳಿಂದ ಇ.ಡಿ ಕಸ್ಟಡಿಯಲ್ಲಿದ್ದ ಮನ್ಸೂರ್ ಖಾನ್ ಅವರನ್ನು ಇ.ಡಿ ಅಧಿಕಾರಿಗಳು ನಗರದ ಸೆಷನ್ಸ್ ಕೋರ್ಟ್ ಪ್ರಧಾನ ನ್ಯಾಯಾಧೀಶ ಶಿವಶಂಕರ ಬಿ.ಅಮರಣ್ಣವರ ಮುಂದೆ ಹಾಜರುಪಡಿಸಿದ್ದರು.
ಇ.ಡಿ ಪರ ವಕೀಲರು, ಆರೋಪಿಯ ಅನಾರೋಗ್ಯ ಕಾರಣದಿಂದ ಸಮಗ್ರ ತನಿಖೆ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಈ ತಿಂಗಳ 30ರವರೆಗೆ ಕಸ್ಟಡಿ ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದರು.
ಜು.19ರಂದು ಐ ಮಾನಿಟರಿ ಅಡ್ವೈಸರಿ (ಐಎಂಎ) ಕಂಪನಿ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಕಂಪನಿ ಮಾಲೀಕ ಮನ್ಸೂರ್ ಖಾನ್'ನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದರು.