ಬೆಂಗಳೂರು, ಜು 26 (Daijiworld News/MSP): ದೋಸ್ತಿ ಸರ್ಕಾರ ಪತನವಾದ ಮೂರು ದಿನಗಳ ಬಳಿಕ ಬಿಎಸ್ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಈ ಹಿನ್ನಲೆಯಲ್ಲಿ ಬಿಎಸ್ ಯಡಿಯೂರಪ್ಪ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ಈ ನಡುವೆ ಬಿಎಸ್ ವೈ ಇಂದು ಸಂಜೆಯೇ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸಿರುವುದಕ್ಕೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್ ಮಾಡಿದ್ದು, "ಬಿಜೆಪಿಗೆ ಬಹುಮತ ಇಲ್ಲದಿದ್ದರೂ ಕೂಡಾ ಬಿಎಸ್ ವೈ ಮುಖ್ಯಮಂತ್ರಿಯಾಗಲು ಹೊರಟಿರುವುದು ಮತ್ತು ಅವರ ತರಾತುರಿಯ ನಿರ್ಧಾರವನ್ನು ರಾಜ್ಯಪಾಲರು ಒಪ್ಪಿರುವುದು- ಎರಡೂ ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಬೆಳವಣಿಗೆಗಳು. ಬಿಜೆಪಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ " ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಖಾತೆಯಲ್ಲಿ, ಬಿಜೆಪಿ ನಡೆಯ ಬಗ್ಗೆ ಟ್ವೀಟಿಸಿದ್ದು " ಸಂಖ್ಯಾಬಲ ಇಲ್ಲದ ಕಾರಣ ಬಿಜೆಪಿಗೆ ಯಾವುದೇ ಕಾರಣಕ್ಕೂ ಹಕ್ಕು ಮಂಡನೆಯಾಗಲಿ ಅಥವಾ ಪ್ರಮಾಣ ವಚನವಾಗಲಿ ಸ್ವೀಕರಿಸಲು ಸಾಧ್ಯವೇ ಇಲ್ಲ" ಎಂದಿದೆ.