ಬೆಂಗಳೂರು, ಜು26(Daijiworld News/SS): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸೂಚನೆ ಮೇರೆಗೆ ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ. ಇಂದು ಸಂಜೆಯ ವೇಳೆ ಯಡಿಯೂರಪ್ಪ ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತೆ ರಾಜ್ಯದ ಮುಖ್ಯಮಂತ್ರಿಗುತ್ತಿರುವುದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ. ಅದರಲ್ಲೂ ಬರ ಪರಿಸ್ಥಿತಿ ಹೆಚ್ಚಾಗಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿ, ರೈತರ ಕಷ್ಟ ಪರಿಹರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ರೈತರು ಮಾತ್ರವಲ್ಲದೇ ನಾಡಿನ ಜನತೆಗೆ ಒಳ್ಳೆಯ ಆಡಳಿತ ನೀಡುತ್ತಾರೆ. ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರವಾದರೆ ಅಂತಹ ಶಾಸಕರನ್ನು ಬಿಜೆಪಿ ಮತ್ತೆ ಗೆಲ್ಲಿಸಲು ಯತ್ನ ನಡೆಸಲಿದೆ ಎಂದು ತಿಳಿಸಿದ್ದಾರೆ.
ಸಂಜೆ 6ರಿಂದ 6.15ರ ಒಳಗೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನದಲ್ಲಿ ಸರಳ ರೀತಿಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.