ಬೆಂಗಳೂರು, 26(Daijiworld News/RD): ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಸೋಮವಾರ ವಿಶ್ವಾಸಮತ ಯಾಚನೆ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಬಿಎಸ್ ವೈಗೆ ಕರೆ ಮಾಡಿದ್ದ ಅಮಿತ್ ಶಾ ಸರ್ಕಾರ ರಚನೆಗೆ ರಾಜ್ಯಪಾಲರ ಬಳಿ ಹಕ್ಕು ಮಂಡಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ರಾಜಭವನಕ್ಕೆ ತೆರಳಿದ ಬಿಎಸ್ ವೈ ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಕೋರಿದ್ದಾರೆ. ಹೀಗಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸರ್ಕಾರ ರಚನೆ ಮಾಡಲು ಅನುಮತಿ ನೀಡಿದ್ದಾರೆ.
ರಾಜ್ಯಪಾಲರ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ ಇಂದು ಸಂಜೆ 6 ರಿಂದ 6.15 ರ ವೇಳೆಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ. ಸರ್ಕಾರ ರಚನೆ ಸಂಬಂಧ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ನಾವು ಮಂಡಿಸಿದ ಮನವಿಯನ್ನು ಸಮ್ಮತಿಸಿರುವ ರಾಜ್ಯಪಾಲರು ಸರ್ಕಾರ ರಚಿಸಲು ಸೂಚನೆ ನೀಡಿದ್ದಾರೆ ಎಂದು ಹೇಳಿದರು
ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಹಂಗಾಮಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ, ಸೇರಿದಂತೆ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದರು. ಜೆಡಿಎಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅವರಿಗೂ ಬಿಎಸ್ವೈ ಈ ಸಮಾರಂಭಕ್ಕೆ ಆಹ್ವಾನಿಸಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿದೆ.