ಬೆಂಗಳೂರು, ಜು 26(DaijiworldNews/SM): ನಾಲ್ಕನೇ ಬಾರಿಗೆ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಜೂಭಾಯಿ ವಾಲಾ ಪ್ರಮಾಣವಚನೆ ಬೋಧಿಸಿದರು.
ದೇವರ ಹೆಸರಿನಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಬಿಜೆಪಿ ಕಾರ್ಯಕರ್ತರು, ನಾಯಕರು ಜಯ ಘೋಷ ಮೊಳಗಿಸಿದರು. ಸಾಮಾನ್ಯ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯದ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕಾರ್ಯಕ್ರಮವನ್ನು ಮುಗಿಸಿದರು.
ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಯಡಿಯೂರಪ್ಪ, ತಮ್ಮ ನೇತೃತ್ವದ ಸರ್ಕಾರ ಜನಪರ ಆಡಳಿತವನ್ನು ನೀಡಲಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯದಿಂದಲೂ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಕೇಂದ್ರ ಸರ್ಕಾರ ತಿಂಗಳಿಗೆ 2 ಸಾವಿರ ರೂಪಾಯಿಯಂತೆ ವಾರ್ಷಿಕ 6 ಸಾವಿರ ರೂಪಾಯಿ ನೀಡುತ್ತಿದೆ. ಈ ಯೋಜನೆಗೆ ರಾಜ್ಯದ ಪಾಲನ್ನು ಕೂಡ ಒದಗಿಸಲಾಗುವುದೆಂದರು. ರಾಜ್ಯದಿಂದ ಮೂರು ಕಂತುಗಳಲ್ಲಿ ನಾಲ್ಕು ಸಾವಿರ ಒದಗಿಸಲಾಗುವುದಾಗಿ ಅವರು ಘೋಷಿಸಿದ್ದಾರೆ. ಆ ಮೂಲಕ ರೈತರಿಗೆ ಒಟ್ಟು 10 ಸಾವಿರ ರೂಪಾಯಿ ಸಿಗಲಿದೆ ಎಂದರು.
ಇನ್ನು ನೇಕಾರರ ಸುಮಾರು 100 ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಲಾಗುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.