ನವದೆಹಲಿ, ಜು27(Daijiworld News/SS): ಜಮ್ಮುಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಭದ್ರತಾ ಪಡೆಯ ದಾಳಿಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಬಾನ್ಬಝಾರ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸ್ಥಳದಲ್ಲಿ ಪೊಲೀಸರು ಸುತ್ತುವರಿದ್ದನ್ನು ನೋಡಿದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆ ಸಿಬ್ಬಂದಿಯೂ ದಾಳಿ ನಡೆಸಿದ್ದು, ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಸಾವನ್ನಪ್ಪಿರುವ ಉಗ್ರರ ಗುರುತು, ಯಾವ ಸಂಘಟನೆಗಳಿಗೆ ಸೇರಿದವರು ಎಂಬುದನ್ನು ಶೀಘ್ರವೇ ಪತ್ತೆಹಚ್ಚಲಾಗುವುದು ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.