ಬೆಳಗಾವಿ, ಫೆ. 13 (DaijiworldNews/AK):ಸುಮಾರು 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಪಕ್ಷವು ಈ ದೇಶದಲ್ಲಿ ಬಡತನ ನಿರ್ಮೂಲನೆ ಮಾಡುವುದಾಗಿ ಹೇಳಿತ್ತು. ಇಂಥ ಲಜ್ಜೆಗೆಟ್ಟ ಕಾಂಗ್ರೆಸ್ ಪಕ್ಷವು ಈ ದೇಶದಲ್ಲಿ ಬಡವರನ್ನು ನಿರ್ಮೂಲನೆ ಮಾಡಿದರೇ ಹೊರತು ಬಡವರ ಬಡತನ ನಿರ್ಮೂಲನೆ ಮಾಡಲು ಇವರಿಂದ ಆಗಿಲ್ಲ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಇಂದು ವಿಬಿ ಜಿ ರಾಮ್ ಜಿ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಪುಡಾರಿಗಳು ಶ್ರೀಮಂತರಾದರು ಎಂದು ಟೀಕಿಸಿದರು. ಕಳೆದ ಎರಡೂವರೆ ವರ್ಷದಲ್ಲಿ ಒಂದಾದರೂ ಹೊಸ ಅಭಿವೃದ್ಧಿ ಯೋಜನೆ ನೀಡಲು ಇವರಿಂದ ಸಾಧ್ಯವಾಗಿದೆಯೇ ಎಂದು ಪ್ರಶ್ನಿಸಿದರು.
ಗೃಹಲಕ್ಷ್ಮಿಯಡಿ 2 ಸಾವಿರ ಕೊಡುವುದಾಗಿ ಬೆನ್ನು ತಟ್ಟಿಕೊಳ್ಳುತ್ತಾರೆ. ಮತ್ತೊಂದೆಡೆ ಗೃಹಲಕ್ಷ್ಮಿ ಯೋಜನೆಗೆ ಹಣ ಕ್ರೋಡೀಕರಿಸಲು ಸಾಧ್ಯವಾಗದೇ ರಾಜ್ಯದಲ್ಲಿ ಅಬಕಾರಿ ಇಲಾಖೆಗೆ 40 ಸಾವಿರ ಕೋಟಿ ವ್ಯವಹಾರದ ಗುರಿ ನೀಡಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ 500 ಮೀಟರ್ಗೆ ಒಂದು ಮೆಡಿಕಲ್ ಶಾಪ್ ಸಿಗುತ್ತದೋ ಇಲ್ಲವೋ ಗೊತ್ತಿಲ್ಲ; ಆದರೆ, 500 ಮೀಟರಿಗೆ ಒಂದು ಹೆಂಡದಂಗಡಿ ಸಿಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯದ ದಿನಸಿ ಅಂಗಡಿಗಳಲ್ಲಿ ಹೆಂಡ ಮಾರಾಟ ಮಾಡುತ್ತಿರುವುದು ಈ ನಾಲಾಯಕ್ ಕಾಂಗ್ರೆಸ್ ಸರಕಾರದ ಸಾಧನೆ ಎಂದು ಅವರು ಟೀಕಿಸಿದರು. ಗೃಹಲಕ್ಷ್ಮಿಯಡಿ 2 ಸಾವಿರ ಕೊಟ್ಟು ಅದೇ ಮನೆಯಿಂದ ಹೆಂಡದ ಮೂಲಕ 10 ಸಾವಿರ ಕಿತ್ತುಕೊಳ್ಳುವುದೇ ಈ ಸರಕಾರದ ಸಾಧನೆ ಎಂದು ತಿಳಿಸಿದರು.