ಬೆಂಗಳೂರು, ಫೆ. 13 (DaijiworldNews/AA): 2026-27ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ಮಂಡಿಸಲಿದ್ದಾರೆ. ವಿಧಾನಮಂಡಲ ಅಧಿವೇಶನ ಮಾರ್ಚ್ 6ರಿಂದ ಆರಂಭವಾಗಿ ಮಾರ್ಚ್ 27ರವರೆಗೆ ಅಂದರೆ ಒಟ್ಟು 14 ದಿನಗಳ ಕಾಲ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.

ಗುರುವಾರ ರಾತ್ರಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, "ವಿಧಾನಮಂಡಲದ ಅಧಿವೇಶನ ಆರಂಭದ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 'ವಿದ್ಯಾವಿಕಾಸ' ಯೋಜನೆಯಡಿ ಶೂ - ಸಾಕ್ಸ್ ನೀಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. 2026-27 ನೇ ಸಾಲಿನ ಶೈಕ್ಷಣಿಕ ಸಾಲಿಗೆ ಉಚಿತವಾಗಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಗಳನ್ನು ವಿತರಿಸಲು ಸಂಪುಟ ಅನುಮೋದನೆ ನೀಡಿದೆ. ಇದಕ್ಕಾಗಿ ಅಂದಾಜು 104 ಕೋಟಿ ರೂಪಾಯಿ ವೆಚ್ಚ ಮಾಡಲು ನಿರ್ಧರಿಸಲಾಗಿದೆ" ಎಂದು ತಿಳಿಸಿದರು.
"ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಸಂಬಂಧಿಸಿದಂತೆ, ಅರ್ಹ ಫಲಾನುಭವಿಗಳಿಗೆ ಶಕ್ತಿ ಸ್ಮಾರ್ಟ್ ಕಾರ್ಡ್ ಗಳನ್ನು ಉಚಿತವಾಗಿ ವಿತರಿಸಲು ಸಂಪುಟ ಒಪ್ಪಿಗೆ ನೀಡಿದೆ. ಸೇವಾ ಸಿಂಧು ಅಥವಾ ಗ್ಯಾರಂಟಿ ಯೋಜನೆಗಳ ನೋಂದಣಿ ಕೇಂದ್ರಗಳ ಮೂಲಕ ಈ ಕಾರ್ಡ್ಗಳನ್ನು ವಿತರಿಸಲಾಗುವುದು" ಎಂದರು.
"ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026 ರ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆದರೆ, ಮೂಲಸೌಕರ್ಯ ಕಲ್ಪಿಸುವುದು ಮತ್ತು ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳುವುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿ, ಈ ಅನುಮತಿ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ಈ ಕುರಿತು ಗೃಹ ಇಲಾಖೆಯು ಪ್ರತ್ಯೇಕ ಆದೇಶ ಹೊರಡಿಸಲಿದೆ" ಎಂದು ಹೇಳಿದರು.