ಬೆಂಗಳೂರು, ಫೆ. 20 (DaijiworldNews/TA): ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಕೋಟ್ಯಾಂತರ ರೂಪಾಯಿ ಲಂಚದ ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮೂಡಾ ಮಾಜಿ ಆಯುಕ್ತ ಡಿಬಿ ನಟೇಶ್ ಬಡ್ತಿ ಪಡೆಯಲು ಮುಖ್ಯಕಾರ್ಯದರ್ಶಿಗೆ ಲಂಚ ನೀಡಿದ್ದಾರೆ ಎಂದು ಸ್ನೇಹಮಹಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು. ಈ ಹೇಳಿಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ನಟೇಶ್ ಅವರು ದೂರು ನೀಡಿದ್ದಾರೆ.
ನಟೇಶ್ ನೀಡಿದ ದೂರಿನ ಅನ್ವಯ ಸಿಸಿಬಿಯ ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಅದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಹಿ ಕೃಷ್ಣ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಸಂಬಂಧ ಇನ್ನಷ್ಟು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದು, ಆರೋಪ-ಪ್ರತ್ಯಾರೋಪಗಳ ಮಧ್ಯೆ ತನಿಖೆ ಮುಂದುವರಿದಿದೆ.