ಬೆಂಗಳೂರು, ಜು30(Daijiworld News/SS): ಇನ್ನು ಮುಂದೆ ಟಿಪ್ಪು ಜಯಂತಿ ಆಚರಣೆ ಮಾಡುವಂತಿಲ್ಲ ಎಂದು ಕರ್ನಾಟಕದ ಬಿಜೆಪಿ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಆದೇಶಿಸಿದೆ.
ಬಿಜೆಪಿ ಶಾಸಕ ಕೆಜಿ ಬೋಪಯ್ಯ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಟಿಪ್ಪುಜಯಂತಿ ಆಚರಣೆಯನ್ನ ರದ್ದುಪಡಿಸುವಂತೆ ಕೋರಿದ್ದರು. ಪ್ರತಿ ನವೆಂಬರ್ 10 ರಂದು ಟಿಪ್ಪು ಜಯಂತಿಯನ್ನ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದೆ. ಆದ್ರೆ ಟಿಪ್ಪು ಜಯಂತಿಗೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಅದನ್ನ ರದ್ದುಪಡಿಸಬೇಕೆಂದು ಕೋರಿ ಪತ್ರ ಬರೆದಿದ್ದರು.
ಈ ಪತ್ರಕ್ಕೆ ಸ್ಪಂದಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಇದೀಗ ಟಿಪ್ಪು ಜಯಂತಿ ಆಚರಣೆಯನ್ನು ರದ್ದು ಮಾಡುವಂತೆ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಭಾರಿ ಪರ-ವಿರೋಧಕ್ಕೆ ಕಾರಣವಾಗಿದ್ದ ಟಿಪ್ಪು ಜಯಂತಿ ಆಚರಣೆಗೆ ರಾಜ್ಯದ ಬಿಜೆಪಿ ಸರ್ಕಾರ ಬ್ರೇಕ್ ಹಾಕಿದ್ದು, ಇನ್ನು ಮುಂದೆ ಟಿಪ್ಪು ಜಯಂತಿ ಆಚರಣೆ ಮಾಡುವಂತಿಲ್ಲ ಎಂದು ಕರ್ನಾಟಕದ ಬಿಜೆಪಿ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಆದೇಶಿಸಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ನಿರ್ಧರಿಸಿ, ಈ ಸಂಬಂಧ ಆದೇಶ ಹೊರಡಿಸಲಾಗಿತ್ತು. ಇದು ರಾಜಕೀಯ ಸಂಘರ್ಷಕ್ಕೆ ಕಾರಣವಾಗಿತ್ತು. ಬಿಜೆಪಿ ಕಾರ್ಯಕ್ರಮವನ್ನು ಬಹಿಷ್ಕರಿಸಿ ಪ್ರತಿಭಟನೆಯನ್ನು ರಾಜ್ಯಾದ್ಯಂತ ಹಮ್ಮಿಕೊಂಡಿತ್ತು. ಆದರೆ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿಯನ್ನು ಆಚರಿಸುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ. ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೂಡ ಟಿಪ್ಪು ಜಯಂತಿಯನ್ನು ಮುಂದುವರಿಸಿದ್ದರು. ಆದರೆ ಇದೀಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಈ ಹಿಂದೆಯೇ ಬಿಜೆಪಿ ಮುಖಂಡರು, ಪಕ್ಷ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ರದ್ದುಪಡಿಸುವುದಾಗಿ ಹೇಳಿದ್ದರು. ಅದರಂತೆ ಇನ್ನು ಮುಂದೆ ಟಿಪ್ಪು ಜಯಂತಿ ಆಚರಣೆ ಮಾಡುವಂತಿಲ್ಲ ಎಂದು ಕರ್ನಾಟಕದ ಬಿಜೆಪಿ ಸರ್ಕಾರ ಆದೇಶಿಸಿದೆ.