ಹುಬ್ಬಳ್ಳಿ, ಜು31(Daijiworld News/SS): ಬಿಜೆಪಿ ಸರಕಾರ ಟಿಪ್ಪು ಜಯಂತಿಯನ್ನು ರದ್ದು ಮಾಡಿದ್ದಕ್ಕೆ ಪರ ವಿರೋಧಗಳು ವ್ಯಕ್ತವಾಗಿವೆ. ಟಿಪ್ಪು ಜಯಂತಿ ರದ್ದತಿಯನ್ನು ಬಿಜೆಪಿ ಸ್ವಾಗತಿಸಿದರೆ, ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.
ರಾಜ್ಯ ಸರಕಾರ ಟಿಪ್ಪು ಜಯಂತಿ ರದ್ದು ಮಾಡಿದ್ದನ್ನು ಖಂಡಿಸಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ಪ್ರತಿಭಟನೆ ನಡೆದಿದೆ.
ಈ ಕುರಿತು ಮಾತನಾಡಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಲ್ತಾಫ ಹಳ್ಳೂರ, ಟಿಪ್ಪು ಸುಲ್ತಾನ್ ಮುಸ್ಲಿಂ ಎಂಬ ಒಂದೇ ಕಾರಣಕ್ಕೆ ಬಿಜೆಪಿ ಸರಕಾರ ಟಿಪ್ಪು ಜಯಂತಿ ರದ್ದು ಮಾಡಿದೆ. ಟಿಪ್ಪು ಒಬ್ಬ ದೇಶಭಕ್ತನಾಗಿದ್ದು, ನಾಡಿನ ಅಭಿವೃದ್ಧಿಗೆ ಶ್ರಮಿಸಿ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿದ್ದರು. ಅವರು ತಂದ ಯೋಜನೆಗಳು ಇಂದಿಗೂ ಜೀವಂತವಾಗಿವೆ. ಅಂತಹ ಮಾಹನ್ ವ್ಯಕ್ತಿಯ ಜಯಂತಿಯನ್ನು ಬಿಜೆಪಿ ಸರಕಾರ ರದ್ದು ಮಾಡಿದ್ದು ಸರಿಯಲ್ಲ ಎಂದು ತೀವ್ರವಾಗಿ ಖಂಡಿಸಿದ್ದಾರೆ.