ಬೆಂಗಳೂರು, ಆ.03(Daijiworld News/SS): ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಮೊದಲ ಕಂತಾಗಿ 2 ಸಾವಿರ ರೂಪಾಯಿ ಹಣವನ್ನು 10 ದಿನಗಳ ಒಳಗಾಗಿ ರೈತರ ಖಾತೆಗೆ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳು, ಪ್ರಾದೇಶಿಕ ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಈ ಕುರಿತು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ರಾಜ್ಯದ 31. 72 ಲಕ್ಷ ರೈತರಿಗೆ ತಲಾ 2 ಸಾವಿರ ರೂಪಾಯಿಗಳನ್ನು 10 ದಿನಗಳ ಒಳಗಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 43. 75 ಲಕ್ಷ ಫಲಾನುಭವಿಗಳ ಪಟ್ಟಿಯನ್ನು ಕಳುಹಿಸಲಾಗಿದೆ ಎಂದು ತಿಳಿಸಿದರು.
ಅರ್ಹ 31.72 ಲಕ್ಷ ಫಲಾನುಭವಿ ರೈತರಿಗೆ ಕೇಂದ್ರ ಸರ್ಕಾರದಿಂದ 6 ಸಾವಿರ ಹಾಗೂ ರಾಜ್ಯ ಸರ್ಕಾರದಿಂದ 4 ಸಾವಿರ ರೂಪಾಯಿ ನೀಡುವುದರಿಂದ ರಾಜ್ಯದ ರೈತರಿಗೆ ವಾರ್ಷಿಕ 10 ಸಾವಿರ ರೂಪಾಯಿ ಸಿಗಲಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಮೊದಲ ಕಂತಾಗಿ 2 ಸಾವಿರ ರೂಪಾಯಿ ಹಣವನ್ನು 10 ದಿನಗಳ ಒಳಗಾಗಿ ಅವರ ಖಾತೆಗೆ ಜಮೆ ಮಾಡಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ.
ಇದೇ ವೇಳೆ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಧನ ಬಿಡುಗಡೆಗೆ ತೊಂದರೆಯಾಗದಂತೆ ಜಿಲ್ಲಾಧಿಕಾರಿಗಳ ಪಿ. ಡಿ ಖಾತೆಯಿಂದಲೇ ಭರಿಸುವಂತೆ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.