ದಾವಣಗೆರೆ, ಮಾ. 14 (DaijiworldNews/TA): ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಮಾರು 4.75 ಲಕ್ಷ ರೂ. ಮೌಲ್ಯದ 320 ಕ್ವಿಂಟಲ್ ಮೆಕ್ಕೆಜೋಳ ಸುಟ್ಟು ಭಸ್ಮವಾಗಿರುವ ಘಟನೆ ನ್ಯಾಮತಿ ತಾಲೂಕಿನ ಯರಗನಾಳ್ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ವೀರಬಸಪ್ಪ ಅವರಿಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸುಮಾರು 70 ಕ್ವಿಂಟಲ್ ಮೆಕ್ಕೆಜೋಳಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಇದರಿಂದ ಅವರಿಗೆ ಸುಮಾರು 1.25 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.
ಅದೇ ರೀತಿ ಗ್ರಾಮದ ಬಸಪ್ಪ ಅವರಿಗೆ ಸೇರಿದ ಎಂಟು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸುಮಾರು 250 ಕ್ವಿಂಟಲ್ ಮೆಕ್ಕೆಜೋಳವೂ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದು, ಸುಮಾರು 3.5 ಲಕ್ಷ ರೂ. ನಷ್ಟವಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಈ ಅವಘಡದಿಂದ ನಷ್ಟಕ್ಕೊಳಗಾದ ರೈತರು ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.