ಹಾಸನ, ಮಾ. 24 (DaijiworldNews/TA): ಜಿಲ್ಲೆಯ ಹಿರೀಸಾವೆ ಸಮೀಪದ ಅಮ್ಮಕುಟೀರ ಲೇಔಟ್ ಬಳಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿ, ಎಂಟಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಕುಂದಾಪುರ ಮೂಲದ ಕೃಷ್ಣ ಶೆಟ್ಟಿ ಎಂದು ಗುರುತಿಸಲಾಗಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದುರ್ಗಾಂಬಾ ಟ್ರಾವೆಲ್ಸ್ಗೆ ಸೇರಿದ ಖಾಸಗಿ ಬಸ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಂಗಳೂರಿನಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನೊಂದು ವಾಹನವನ್ನು ಹಿಂದಿಕ್ಕುವ ಪ್ರಯತ್ನದಲ್ಲಿ ಬಸ್ ಮುಂದೆ ಸಾಗುತ್ತಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಎಂಟಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ತಕ್ಷಣವೇ ಆದಿಚುಂಚನಗಿರಿ ಆಸ್ಪತ್ರೆಗೆ ಹಾಗೂ ಇತರ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಬ್ ಇನ್ಸ್ಪೆಕ್ಟರ್ ರೂಪಾದೇವಿ ಮಾಹಿತಿ ಪ್ರಕಾರ, ಬಸ್ನಲ್ಲಿ ಚಾಲಕ ಮತ್ತು ನಿರ್ವಾಹಕರೊಂದಿಗೆ ಒಟ್ಟು 32 ಮಂದಿ ಪ್ರಯಾಣಿಸುತ್ತಿದ್ದರು. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.