ರಾಯಚೂರು, ಆ 05 (DaijiworldNews/SM): ಈಗಾಗಲೇ ರಾಜ್ಯದಲ್ಲಿ ಅಧಿಕಾರ ಸ್ವೀಕರಿಸುವ ಸಂದರ್ಭ ಸಿಎಂ ಯಡಿಯೂರಪ್ಪನವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರಾಜ್ಯದಿಂದ 4 ಸಾವಿರ ರೂಪಾಯಿ ನೀಡುವುದಾಗಿ ಘೋಷಿಸಿದ್ದು, ಮೊದಲ ಹಂತದ ಅನುದಾನವನ್ನು ಹತ್ತು ದಿನದೊಳಗೆ ರೈತರ ಖಾತೆಗೆ ವರ್ಗಾಯಿಸಲಾಗುವುದಾಗಿ ಸಿಎಂಬಿಎಸ್ ವೈ ತಿಳಿಸಿದ್ದಾರೆ.
ನೆರೆ -ಬರದಿಂದ ಕೆಂಗೆಟ್ಟಿರುವ ರಾಜ್ಯದ ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯದ ರೈತರಿಗೆ ಮೊದಲ ಕಂತು ನೀಡಲು ಸಿಎಂ ನಿರ್ಧರಿಸಿದ್ದಾರೆ. ಜಿಲ್ಲೆಯಲ್ಲಿ ತಲೆದೋರಿರುವ ನೆರೆ ಪರಿಸ್ಥಿತಿ ಕುರಿತು ವೈಮಾನಿಕ ಸಮೀಕ್ಷೆ ನಡೆಸಿ ಅಧಿಕಾರಿಗಳಿಂದ ವರದಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ನೆರೆ ಮತ್ತು ಬರ ಪರಿಸ್ಥಿತಿಯಿಂದಾಗಿ ರಾಜ್ಯದ ರೈತರು ಸಂಕಷ್ಟದಲಿದ್ದು, ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರ ರೈತರಿಗೆ ಮೂರು ಕಂತುಗಳಲ್ಲಿ ಆರು ಸಾವಿರ ರೂ ನೆರವು ನೀಡುತ್ತಿದ್ದು, ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಸಹ ಎರಡು ಕಂತುಗಳಲ್ಲಿ ನಾಲ್ಕು ಸಾವಿರ ರೂ ನೆರವು ನೀಡಲಿದೆ ಎಂದರು. ಮೊದಲ ಕಂತು ಪಾವತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.