ಹೊಸದಿಲ್ಲಿ, ಆ.06(Daijiworld News/SS): ಅರಬ್ಬೀ ಸಮುದ್ರದಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಮಳೆಯ ಮಾರುತಗಳು ಚಲಿಸುತ್ತಿದ್ದು, ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ಹಾಗೂ ಗುಜರಾತ್ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಹಾರಾಷ್ಟ್ರದಲ್ಲಿ ಭರ್ಜರಿ ಮಳೆ ಪರಿಣಾಮ ಅಣೆಕಟ್ಟೆಯಿಂದ ಹೊರಬಿಡಲಾಗುತ್ತಿರುವ ನೀರು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಸೃಷ್ಟಿಸಿದ್ದು, ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಉಲ್ಬಣಿಸುವ ಸಾಧ್ಯತೆಗಳಿವೆ. ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಚಂಡೀಗಢ ಹಾಗೂ ಈಶಾನ್ಯ ಭಾರತದ ರಾಜ್ಯಗಳಲ್ಲೂ ಮುಂದಿನ ಒಂದೆರಡು ದಿನದಲ್ಲಿ ಕುಂಭದ್ರೋಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದೂ ಇಲಾಖೆ ಎಚ್ಚರಿಸಿದೆ.
ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ತೆರಳದಂತೆ ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ, ಒಡಿಶಾ ಹಾಗೂ ಅಂಡಮಾನ್ ನಿಕೋಬಾರ್ ದ್ವೀಪದ ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ಕಳೆದ 30 ಗಂಟೆಗಳಿಂದ ಒಂದೇ ಸಮನೆ ಮಳೆ ಸುರಿಯುತ್ತಿರುವ ಮುಂಬಯಿನಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.