ಬೆಂಗಳೂರು, ಆ 07 (DaijiworldNews/SM): ರಾಜ್ಯದಲ್ಲಿ ನಿರಂತರ ಮಳೆಯಿಂದಾಗಿ ಅಪಾರ ಹಾನಿಯಾಗಿದ್ದು, ಪ್ರವಾಹ ಸಂತ್ರಸ್ತ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿಗಳಿಗೆ ಮೊದಲ ಆದ್ಯತೆ ನೀಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಸಂತ್ರಸ್ತರಿಗೆ ಪರಿಹಾರ ಒದಗಿಸುವ ಕಾರ್ಯ ಮಾಡಲಾಗುವುದು. ಬಳಿಕ ಸಚಿವ ಸಂಪುಟ ರಚನೆ ಬಗ್ಗೆ ಯೋಚನೆ ಮಾಡುವೆ ಎಂದಿದ್ದಾರೆ.
ಬುಧವಾರದಂದು ಸಂಪುಟ ವಿಸ್ತರಣೆ ವಿಚಾರವಾಗಿ ಅಮಿತ್ ಶಾ ಜತೆಗೆ ಮಾತುಕತೆ ಮಾಡಲಿದ್ದರು. ಹಾಗೂ ದೆಹಲಿಗೆ ತೆರಳಿದ್ದರು. ಆದರೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ಬೆಂಗಳೂರಿಗೆ ವಾಪಸ್ಸಾಗಿದ್ದೇನೆ. ಮೂರು ದಿನಗಳು ಪ್ರವಾಹದಿಂದ ಸಮಸ್ಯೆಗೆ ಸಿಲುಕಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬುಧವಾರ ಹೇಳಿದ್ದಾರೆ.
ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇನೆ. ಅಧ್ಯಕ್ಷರ ಸೂಚನೆ ಮೇರೆಗೆ ಮೊದಲು ಪ್ರವಾಹ ಸಮಸ್ಯೆ ಬಗೆಹರಿಸಿದ ನಂತರ ಸಂಪುಟ ವಿಸ್ತರಣೆ ಬಗ್ಗೆ ನೋಡೋಣ ಎಂದು ಬಿಜೆಪಿ ವರಿಷ್ಠರು ಹೇಳಿದ್ದಾರೆ ಎಂದರು.