ಬೆಂಗಳೂರು, ಆ.08(Daijiworld News/SS): ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸಚಿವ ಸಂಪುಟ ರಚನೆ ಮಾಡದೆ, ಹೊಸದಿಲ್ಲಿಗೆ ದಂಡಯಾತ್ರೆ ನಡೆಸುತ್ತಿರುವ ಬಗ್ಗೆ ಪ್ರತಿಪಕ್ಷಗಳು ಟೀಕಿಸಿವೆ. ರಾಜ್ಯದಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ನಡುವೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಸಾಕಷ್ಟು ಟ್ರೋಲ್ ಆಗಿದ್ದ ನಿಖಿಲ್ ಎಲ್ಲಿದ್ದೀಯಪ್ಪ ಈಗ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ತಿರುಗಿ ನಿಂತಿದೆ. ರಾಜ್ಯದಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾಗಿರುವುದರಿಂದ ಎಚ್ಡಿ ಕುಮಾರಸ್ವಾಮಿ ಅವರು, "ಯಡಿಯೂರಪ್ಪ ಎಲ್ಲಿದ್ದೀಯಪ್ಪ" ಅಂತಾ ಕೇಳುವಂತಾಗಿದೆ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಈ ಮೊದಲು ನಿಖಿಲ್ ಎಲ್ಲಿದ್ದೀಯಪ್ಪ ಎನ್ನುತ್ತಿದ್ದರು. ಈಗ ಅದೇ ಜನರು ಯಡಿಯೂರಪ್ಪ ಎಲ್ಲಿದ್ದೀಯಪ್ಪ ಎಂದು ಕೇಳಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಮಾಜಿ ಸಚಿವ ಕೃಷ್ಣ ಬೈರೇಗೌಡ, ರಾಜ್ಯದ ಅನೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮುಖ್ಯಮಂತ್ರಿಯಾಗಲೀ ಅಥವಾ ಸಚಿವರಾಗಲೀ ಜನರ ಸಂಕಷ್ಟವನ್ನು ಆಲಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.