ನವದೆಹಲಿ,ಏ. 08 (DaijiworldNews/AK): ಅಮೆರಿಕ-ಇಸ್ರೇಲ್ ಮತ್ತು ಅಮೆರಿಕದ ನಡುವಿನ ಕದನ ವಿರಾಮದ ಕುರಿತು ಭಾರತ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ. ನಾವು ಕದನ ವಿರಾಮವನ್ನು ಸ್ವಾಗತಿಸುತ್ತೇವೆ ಮತ್ತು ಅದು ಪಶ್ಚಿಮ ಏಷ್ಯಾದಲ್ಲಿ ಶಾಶ್ವತ ಶಾಂತಿಯನ್ನು ಸ್ಥಾಪಿಸುತ್ತದೆ ಎಂದು ಆಶಿಸುತ್ತೇವೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ನಾವು ಹಿಂದೆ ಪದೇ ಪದೇ ಹೇಳಿದಂತೆ, ನಡೆಯುತ್ತಿರುವ ಸಂಘರ್ಷವನ್ನು ಸಾಧ್ಯವಾದಷ್ಟು ಬೇಗ ಕೊನೆಗೊಳಿಸಲು ಉದ್ವಿಗ್ನತೆಯನ್ನು ಕಡಿಮೆ ಮಾಡುವುದು, ಸಂವಾದ ಮತ್ತು ರಾಜತಾಂತ್ರಿಕತೆ ಅತ್ಯಗತ್ಯ ಎಂದು ಸಚಿವಾಲಯ ಹೇಳಿದೆ.
ಈ ಸಂಘರ್ಷ ಈಗಾಗಲೇ ಜನರಿಗೆ ಅಪಾರ ನೋವನ್ನುಂಟು ಮಾಡಿದೆ ಮತ್ತು ಜಾಗತಿಕ ಇಂಧನ ಪೂರೈಕೆ ಮತ್ತು ವ್ಯಾಪಾರ ಜಾಲಗಳಿಗೆ ಅಡ್ಡಿಪಡಿಸಿದೆ. ಹಾರ್ಮುಜ್ ಜಲಸಂಧಿಯ ಮೂಲಕ ಸಂಚಾರ ಮೊದಲಿನಂತೆಯೇ ಯಾವುದೇ ಅಡೆತಡೆ ಇಲ್ಲದೆ ನಡೆಯುತ್ತದೆ ಎಂದು ಭಾವಿಸಿದ್ದೇವೆ ಎಂದು ತಿಳಿಸಲಾಗಿದೆ.
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಕದನ ವಿರಾಮದಿಂದ ಮಧ್ಯಪ್ರಾಚ್ಯದಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿದ್ದ ಹೋರಾಟ ನಿಂತಿದೆ. ಇರಾನ್ ಐತಿಹಾಸಿಕ ವಿಜಯ ಸಾಧಿಸಿದೆ. ಡೊನಾಲ್ಡ್ ಟ್ರಂಪ್ ತಮ್ಮ ಬೆದರಿಕೆ ದಾಳಿಗಳಿಂದ ಹಿಂದೆ ಸರಿದು ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ ಇರಾನ್ ಈ ಹೇಳಿಕೆ ನೀಡಿದೆ.