ಶಿವಮೊಗ್ಗ, ಏ. 10 (DaijiworldNews/TA) : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ನಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ ರೂ. 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ದುಃಖಕರವಾಗಿದೆ ಎಂದು ತಿಳಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸಿದ್ದಾರೆ.
ಘಟನೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿ ಮಾಹಿತಿ ಪಡೆದಿರುವುದಾಗಿ ತಿಳಿಸಿದ ಸಿಎಂ, ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಕಳೆದುಹೋಗಿರುವ ಹಿನ್ನೆಲೆಯಲ್ಲಿ ಮಾನವೀಯ ನೆಲೆಯಲ್ಲಿ ಪರಿಹಾರ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.
ಈ ದುರಂತದಲ್ಲಿ ಚಕ್ಕಾರು ಗ್ರಾಮದ ರಾಘು (37), ಹಾವೇರಿ ಜಿಲ್ಲೆಯ ನೆಲಗಲು ಗ್ರಾಮದ ರಾಜು (30) ಹಾಗೂ ಕಾರ್ಮಿಕ ಶಬ್ಬೀರ್ (40) ಮೃತಪಟ್ಟಿದ್ದಾರೆ. ಇವರಲ್ಲಿ ಇಬ್ಬರ ಮೃತದೇಹಗಳು ಗುರುವಾರ ಪತ್ತೆಯಾಗಿದ್ದು, ಮತ್ತೊಬ್ಬರ ಶವ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ. ಮೃತದೇಹಗಳನ್ನು ನಗರದ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಗಾಯಗೊಂಡ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳದಲ್ಲಿ ಎಸ್ಡಿಆರ್ಎಫ್, ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ನಡೆಸಿದ ರಕ್ಷಣಾ ಕಾರ್ಯಾಚರಣೆ ಇದೀಗ ಪೂರ್ಣಗೊಂಡಿದೆ.