ಬೆಂಗಳೂರು,ಆ.12(Daijiworld News/RD): ಭೀಕರ ಪ್ರವಾಹಕ್ಕೆ ತುತ್ತಾಗಿರುವ ರಾಜ್ಯದ ಹಲವು ಜಿಲ್ಲೆಗಳು, ಇದೀಗ ರಾಜ್ಯದಲ್ಲಿ ನೆರೆಯಿಂದಾಗಿ ಆಗಸ್ಟ್ 1 ರಿಂದ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆಯಾಗಿದ್ದು, ಜೊತೆಗೆ 14 ಜನರು ಕಣ್ಮರೆಯಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ರಾಜ್ಯದ 17 ಜಿಲ್ಲೆಗಳಲ್ಲಿ 80 ತಾಲೂಕುಗಳು, 2028 ಗ್ರಾಮಗಳು ಪ್ರವಾಹಕ್ಕೆ ನಲುಗಿ ಹೋಗಿದ್ದು, 5,81,702 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. 50,565 ಜಾನುವಾರುಗಳನ್ನು ರಕ್ಷಿಸಲಾಗಿದೆ. 1168 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 3,27,354 ಜನರು ಆಶ್ರಯ ಪಡೆದುಕೊಂಡಿದ್ದಾರೆ. ಇನ್ನೂ 28, 325 ಮನೆಗಳು ಹಾನಿಯಾಗಿದ್ದು, 4.20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದೆ.
ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಸೇರಿದಂತೆ ರಾಜ್ಯದ ಹಲವು ಕಡೆಗಳು ವರುಣ ರೌದ್ರವತಾರಕ್ಕೆ ತುತ್ತಾಗಿದ್ದು. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದ್ದಾರೆ. ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರಲ್ಲಿಮಾತನಾಡಿದ ಬಿಎಸ್ ವೈ ಪ್ರವಾಹ ಸ್ಥಿತಿಯನ್ನು ನೋಡಿದರೆ ಅಂದಾಜು 30 ರಿಂದ 40 ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ ಎಂಬುದು ತಮ್ಮ ಅಭಿಪ್ರಾಯ ಎಂದರು.
ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ ನೆರೆ ಪ್ರವಾಹ ಹಾಗೂ ಧಾರಾಕಾರ ಮಳೆಯಿಂದಾಗಿ 10 ಸಾವಿರ ಕೋಟಿ ರೂ.ನಷ್ಟು ಹಾನಿಯಾಗಿದೆ ಎಂದು ಪ್ರಾಥಮಿಕ ಅಂದಾಜು ಮಾಡಲಾಗಿದೆ. ಸಮಗ್ರ ಸಮೀಕ್ಷೆ ಬಳಿಕ ಹಾನಿಯಾದ ಕುರಿತು ಸ್ಪಷ್ಟತೆ ಸಿಗಲಿದೆ . ತುರ್ತಾಗಿ 3 ಸಾವಿರ ಕೋ ರೂ. ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರ್ಕಾರ ಇನ್ನು ನಿರ್ಧರಿಸಿ ಘೋಷಣೆ ಮಾಡಲಿದೆ. ಜನ ಹಾಗೂ ಜಾನುವಾರುಗಳ ರಕ್ಷಣೆ, ಪುನರ್ವಸತಿ ಕಲ್ಪಿಸುವುದು, ಜನರಿಗೆ ಪರಿಹಾರ ನೀಡುವುದು ಸರ್ಕಾರದ ಮೊದಲ ಆದ್ಯತೆ ನೀಡುತ್ತದೆ. ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎಂದು ಈ ಸಂದರ್ಭದಲ್ಲಿ ಹೇಳಿದರು.