ಬೆಂಗಳೂರು,ಆ 13 (Daijiworld News/MSP):ರಾಜ್ಯಾದ್ಯಂತ ಸರಳ ಸ್ವಾತಂತ್ರ್ಯ ದಿನ ಆಚರಣೆಗೆ ಸರ್ಕಾರ ಆದೇಶ ಈ ಬಾರಿ ರಾಜ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಮಳೆ ಹಾಗೂ ಪ್ರವಾಹದಿಂದ ಕರುನಾಡು ತತ್ತರಿಸಿ ಹೋಗಿದ್ದು, ಈ ಹಿನ್ನಲೆಯಲ್ಲಿ ಸರಳ ಆಚರಣೆಗೆ ಒತ್ತು ನೀಡಲಾಗಿದೆ ಎಂದು ತಿಳಿದುಬಂದಿದೆ.
ಇನ್ನೊಂದೆಡೆ ಮೈತ್ರಿ ಸರ್ಕಾರದ ಪತನದ ಬಳಿಕ ರಾಜ್ಯದಲ್ಲಿ ಇನ್ನೂ ಕೂಡಾ ಸಚಿವ ಸಂಪುಟ ವಿಸ್ತರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗದ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಆ. 15 ರಂದು ಆಚರಿಸುವ ಸ್ವಾತಂತ್ರ್ಯ ದಿನಾಚರಣೆಯಂದು ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು, ಉಪ ವಿಭಾಗಗಳಲ್ಲಿ ಉಪ ವಿಭಾಗಾಧಿಕಾರಿಗಳು ಮತ್ತು ತಾಲೂಕುಗಳಲ್ಲಿ ತಹಸೀಲ್ದಾರ್ ಅವರು ಧ್ವಜಾರೋಹಣ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.