ಶಿವಮೊಗ್ಗ, ಆ.13(Daijiworld News/SS): ಕೃಷಿಕರು ಕಂಗಾಲಾಗುವ ಅಗತ್ಯವಿಲ್ಲ. ನಿಮ್ಮ ಜತೆ ನಾನೀದ್ದೇನೆ. ರೈತರಿಗೆ ರಾಜ್ಯ ಸರಕಾರದಿಂದ ಎಲ್ಲ ರೀತಿಯ ನೆರವು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ಶಿವಮೊಗ್ಗ ಜಿಲ್ಲೆಯ ನೆರೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ನಡೆಸಿದರು. ತೀರ್ಥಹಳ್ಳಿ ತಾಲೂಕಿನ ಹೆಗ್ಗಲತ್ತಿ ಗ್ರಾಮಕ್ಕೆ ಭೇಟಿ ನೀಡಿ ಭಾರಿ ಮಳೆಯಿಂದ ಉಂಟಾಗಿದ್ದ ಭೂಕುಸಿತ ಸೇರಿದಂತೆ ಇತರೆ ಹಾನಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿ ಪರಿಶೀಲಿಸುತ್ತಿದ್ದೇನೆ. ಗ್ರಾಮದಲ್ಲಿ ಗುಡ್ಡ ಕುಸಿತದಿಂದ 40ಕ್ಕೂ ಹೆಚ್ಚು ಎಕರೆ ಹೊಲ, ಗದ್ದೆ ನೆಲಸಮವಾಗಿದೆ. ಒಂದು ವಾರದ ಒಳಗಾಗಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಪ್ರವಾಹ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಸದ್ಯದಲ್ಲಿಯೇ ವಿಶೇಷ ಪ್ಯಾಕೇಜ್ ಘೋಷಿಸಲಾಗುವುದು. ಪ್ರವಾಹದಿಂದ ಹಾನಿಗೀಡಾದ ಅರಣ್ಯ ಭೂಮಿ, ಕೃಷಿ ಭೂಮಿ, ಆಸ್ತಿ ಪಾಸ್ತಿಗಳ ಸಮಗ್ರ ಸಮೀಕ್ಷೆಗೆ ಸೂಚನೆ ನೀಡಲಾಗಿದೆ. ಕೃಷಿಕರು ಕಂಗಾಲಾಗುವ ಅಗತ್ಯವಿಲ್ಲ. ನಿಮ್ಮ ಜತೆ ನಾನೀದ್ದೇನೆ. ರೈತರಿಗೆ ರಾಜ್ಯ ಸರಕಾರದಿಂದ ಎಲ್ಲ ರೀತಿಯ ನೆರವು ನೀಡಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಸು ಕಳೆದುಕೊಂಡ ಮೂರು ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದರು.