ನವದೆಹಲಿ, ಏ. 12 (DaijiworldNews/TA): ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಸಾವಿರಾರು ಗೀತೆಗಳಿಗೆ ಧ್ವನಿಯಾದ ಆಶಾ ಭೋಸ್ಲೆ ಅವರು ಮುಂಬೈನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ (ಏಪ್ರಿಲ್ 12) ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಅವರ ನಿಧನದ ಬಗ್ಗೆ ಮಾಹಿತಿ ನೀಡಿದ ಡಾ. ಪ್ರತೀತ್, ಹಿರಿಯ ಗಾಯಕಿ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು ಎಂದು ಖಚಿತಪಡಿಸಿದ್ದಾರೆ. ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರಿಗೆ ತೀವ್ರ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿಸಿದ್ದಾರೆ. ಆಶಾ ಭೋಸ್ಲೆ ಅವರ ನಿಧನಕ್ಕೆ ದೇಶದ ರಾಜಕೀಯ, ಸಿನಿಮಾ ಹಾಗೂ ಸಾಮಾಜಿಕ ಕ್ಷೇತ್ರಗಳಿಂದ ತೀವ್ರ ಸಂತಾಪ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ಮೂಲಕ ಶೋಕ ಸಂದೇಶ ಹಂಚಿಕೊಂಡಿದ್ದಾರೆ.
ಮೋದಿಯವರು ತಮ್ಮ ಸಂದೇಶದಲ್ಲಿ, “ಅವರ ದಶಕಗಳ ಸಂಗೀತ ಪ್ರಯಾಣವು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದೆ ಮತ್ತು ವಿಶ್ವದಾದ್ಯಂತ ಲಕ್ಷಾಂತರ ಹೃದಯಗಳನ್ನು ಸ್ಪರ್ಶಿಸಿದೆ” ಎಂದು ಹೇಳಿದ್ದಾರೆ. ಜೊತೆಗೆ ಅವರೊಂದಿಗೆ ನಡೆಸಿದ ಸಂವಾದಗಳನ್ನು ಸದಾ ನೆನಪಿಸಿಕೊಳ್ಳುವುದಾಗಿ ತಿಳಿಸಿದ್ದಾರೆ ಮತ್ತು ಕುಟುಂಬ ಹಾಗೂ ಅಭಿಮಾನಿಗಳಿಗೆ ಸಂತಾಪ ಸೂಚಿಸಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಸಂತಾಪ ವ್ಯಕ್ತಪಡಿಸಿದ್ದು, ಆಶಾ ಭೋಸ್ಲೆ ಅವರ ಗಾಯನವು ಭಾಷೆ ಮತ್ತು ಗಡಿಗಳನ್ನು ಮೀರಿದ ಶಕ್ತಿಯಾಗಿತ್ತು ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ನಾಯಕರು ಕೂಡ ಕಂಬನಿ ಮಿಡಿದಿದ್ದಾರೆ. ಸಿನಿಮಾ, ರಾಜಕೀಯ, ಕ್ರೀಡೆ ಹಾಗೂ ಸಂಗೀತ ಕ್ಷೇತ್ರದ ಅನೇಕ ಗಣ್ಯರು ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ದಶಕಗಳ ಕಾಲ ತಮ್ಮ ವಿಶಿಷ್ಟ ಧ್ವನಿಯಿಂದ ಗುರುತಿಸಿಕೊಂಡಿದ್ದ ಆಶಾ ಭೋಸ್ಲೆ ಅವರ ಅಗಲಿಕೆಯಿಂದ ಭಾರತೀಯ ಸಂಗೀತ ಲೋಕ ಒಂದು ಯುಗವನ್ನು ಕಳೆದುಕೊಂಡಂತಾಗಿದೆ.