ಮಡಿಕೇರಿ, ಏ. 12 (DaijiworldNews/TA): ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40) ದಾರುಣವಾಗಿ ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 275ರ ಆನೆಕಾಡು ಸಮೀಪ ಈ ದುರ್ಘಟನೆ ನಡೆದಿದೆ. ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ಹರೀಶ್ ಅವರು ಕುಶಾಲನಗರದಿಂದ ತಮ್ಮ ಸ್ವಗ್ರಾಮ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ಗೆ ಅವರ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಹರೀಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಭೀಕರತೆ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಮೃತ ಹರೀಶ್ ಬಹುಮುಖಿ ಪ್ರತಿಭೆಯಾಗಿದ್ದು, ಹಲವು ಕನ್ನಡ ಸಿನಿಮಾಗಳಲ್ಲಿ ಸಹ ಕಲಾವಿದನಾಗಿ ಮತ್ತು ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿ ತಮ್ಮದೇ ಆದ ಗುರುತನ್ನು ನಿರ್ಮಿಸಿಕೊಂಡಿದ್ದರು. ಅವರ ಅಕಾಲಿಕ ನಿಧನದಿಂದ ಚಿತ್ರರಂಗ ಮತ್ತು ಕಿರುತೆರೆ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.