ಬೆಂಗಳೂರು, ಏ. 12 (DaijiworldNews/TA): ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ. ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ನೀಡಿದ ಡಿ. ಕೆ. ಶಿವಕುಮಾರ್ ಅವರು, “ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ” ಎಂದು ತಿಳಿಸಿದ್ದಾರೆ. ಜೊತೆಗೆ, ನೂತನ ಸಮಿತಿಯನ್ನು ಶೀಘ್ರದಲ್ಲೇ ರಚಿಸುವುದಾಗಿ ಹೇಳಿದ್ದಾರೆ.
ದಾವಣಗೆರೆ ದಕ್ಷಿಣ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಂಟಾದ ಅಸಮಾಧಾನ ಈ ಬೆಳವಣಿಗೆಗೆ ಕಾರಣವಾಗಿದೆ ಎನ್ನಲಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡದ ವಿಚಾರಕ್ಕೆ ಆರಂಭವಾದ ಅಸಮಾಧಾನ, ಚುನಾವಣೆಯ ಬಳಿಕವೂ ಮುಂದುವರಿದಿದೆ.
ಅಬ್ದುಲ್ ಜಬ್ಬಾರ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ, ಇದೀಗ ಅದನ್ನು ಅಧಿಕೃತವಾಗಿ ಅಂಗೀಕರಿಸಲಾಗಿದೆ. ಈ ನಡುವೆ ಪಕ್ಷದೊಳಗಿನ ಭಿನ್ನಮತ, ಬಂಡಾಯ ಮತ್ತು ಗೊಂದಲಗಳು ಇನ್ನೂ ಸಂಪೂರ್ಣ ಶಮನವಾಗಿಲ್ಲ ಎಂಬುದು ಸ್ಪಷ್ಟವಾಗಿದೆ.
ಒಟ್ಟಿನಲ್ಲಿ, ದಾವಣಗೆರೆ ದಕ್ಷಿಣ ಉಪಚುನಾವಣೆಯ ಬಳಿಕ ಕಾಂಗ್ರೆಸ್ನೊಳಗಿನ ಅಸಮಾಧಾನ ಇನ್ನಷ್ಟು ತೀವ್ರಗೊಂಡಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.