ಶ್ರೀನಗರ, ಆ.15(Daijiworld News/SS): ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರ ರದ್ದುಗೊಳಿಸಿದ ಬಳಿಕ ಜಮ್ಮು ಕಾಶ್ಮೀರದಲ್ಲಿ ಸ್ವಾತಂತ್ರ್ಯದಿನವನ್ನು ಆಚರಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಆ. 4ರಿಂದ ಜಾರಿಯಲ್ಲಿರುವ ನಿಷೇಧಾಜ್ಞೆ, ಅಂತರ್ಜಾಲ, ದೂರವಾಣಿ ನಿರ್ಬಂಧವನ್ನು ಜಮ್ಮು ಭಾಗದಲ್ಲಿ ಸಂಪೂರ್ಣ ತೆರವುಗೊಳಿಸಲಾಗಿದೆ. ಆದರೆ ಕಾಶ್ಮೀರದಲ್ಲಿ ಇನ್ನೂ ಕೆಲ ಕಾಲ ಮುಂದುವರಿಯಲಿದೆ. ಪ್ರಸ್ತುತ ಶಾಂತಸ್ಥಿತಿ ಇದ್ದು, 73ನೇ ಸ್ವಾತಂತ್ರ್ಯೋತ್ಸವಕ್ಕೆ ಸಿದ್ಧತೆ ಭರದಿಂದ ನಡೆದಿದೆ ಎಂದು ರಾಜ್ಯ ಪೊಲೀಸ್ ಇಲಾಖೆ ತಿಳಿಸಿದೆ.
ಜಮ್ಮು- ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮತ್ತು ಪುನರ್ ರಚನೆ ನಂತರ ಕೆಲವು ಕಡೆ ಮಾತ್ರ ಕಲ್ಲುತೂರಾಟ ನಡೆದಿದೆ ಎಂದು ಸರ್ಕಾರ ತಿಳಿಸಿದೆ. ಅವಶ್ಯಕ ವಸ್ತು ಪೂರೈಕೆಗಳು, ಆರೋಗ್ಯ ಸೇವೆಗಳು ರಾಷ್ಟ್ರೀಯ ಹೆದ್ದಾರಿ, ವಿಮಾನ ನಿಲ್ದಾಣ ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಶ್ರೀನಗರ ಮತ್ತು ಇತರ ಕಡೆಗಳಲ್ಲಿ ನಿಷೇಧಾಜ್ಞೆಯನ್ನು ಶೀಘ್ರ ತೆರವುಗೊಳಿಸಲಾಗುವುದು ಎಂದು ರಾಜ್ಯದ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಲ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸದ್ಯ ಜಮ್ಮು-ಕಾಶ್ಮೀರದಲ್ಲಿ ಜನರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ 300 ಸಾರ್ವಜನಿಕ ದೂರವಾಣಿ ಕೇಂದ್ರ ತೆರೆಯಲಾಗಿದೆ.