ಬೆಂಗಳೂರು, ಆ.15(Daijiworld News/SS): ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಚಿಸಲಾಗಿದೆ. ಕೊಡಗು, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಗುರುವಾರ ರೆಡ್ ಅಲರ್ಟ್ ಘೋಷಿಸಿದೆ.
ಮಹಾರಾಷ್ಟ್ರ ಮತ್ತು ಛತ್ತೀಸ್ ಗಢದಲ್ಲಿ ವಾಯುಭಾರ ಕುಸಿತದಿಂದ ಮುಂಗಾರು ಮಾರುತಗಳು ಮತ್ತಷ್ಟು ಚುರುಕುಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ ಒಟ್ಟು ಆರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. 24 ತಾಸಲ್ಲಿ 205 ಮಿ.ಮೀಗೂ ಹೆಚ್ಚು ಮಳೆ ಸಾಧ್ಯತೆ ಇದೆ ಎನ್ನಲಾಗಿದೆ. ಕರಾವಳಿ, ಮಲೆನಾಡಲ್ಲಿ ಹೆಚ್ಚು ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮೈಸೂರು, ಹಾಸನ, ಬೆಳಗಾವಿಯಲ್ಲಿ ಒಂದು ದಿನದಲ್ಲಿ 115 ಮಿ.ಮೀ ನಿಂದ 205 ಮಿ.ಮೀವರೆಗೆ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ದಕ್ಷಿಣ ಪ್ರದೇಶದ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಆ.16ರಿಂದ ಆ.18ರವರೆಗೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ.