ನವದೆಹಲಿ, ಆ 17 (DaijiworldNews/SM): ಕೊನೆಗೂ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಮಂಗಳವಾರದಂದು ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ.
ಆಗಸ್ಟ್ 17ರ ಶನಿವಾರದಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶನಿವಾರದಂದು ಸಂಜೆ ಅಮಿತ್ ಶಾ ಅವರನ್ನು ಬಿ.ಎಸ್ ಯಡಿಯೂರಪ್ಪ ಭೇಟಿಯಾಗಿದ್ದರು. ಬಳಿಕ ಮಾತುಕತೆ ನಡೆಸಿ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.
ಬಿಜೆಪಿ ಸರ್ಕಾರದ ಸಚಿವ ಸಂಪುಟ ರಚನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಒಪ್ಪಿಗೆ ಸೂಚಿಸಿದ್ದು, ಮಂಗಳವಾರ ಮೊದಲ ಹಂತದ ಸಂಪುಟ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮೂಲಕ ತಿಳಿಸಿದ್ದಾರೆ. ಪಕ್ಷಾಧ್ಯಕ್ಷರಿಗೆ ಯಡಿಯೂರಪ್ಪ ಸಂಭಾವ್ಯ ಸಚಿವರ ಪಟ್ಟಿಯನ್ನು ಸಲ್ಲಿಸಿದ್ದು, ಸಂಪುಟ ಸೇರುವವರು ಯಾರು ಎನ್ನುವ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಇದೀಗ ಸಚಿವಾಕಾಂಕ್ಷಿಗಳ ಪಟ್ಟಿಗೆ ಅನುಮೋದನೆ ದೊರೆಯುವುದು ಮಾತ್ರ ಬಾಕಿ ಇದೆ.
ಮಂಗಳವಾರ ಬೆಳಗ್ಗೆ 10ಕ್ಕೆ ವಿಧಾನಸಭೆಯ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ನಂತರ ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
ಸಂಪುಟ ರಚನೆಗೆ ಅನುಮತಿ ದೊರೆಯುತ್ತಿದ್ದಂತೆ ಗೃಹ ಇಲಾಖೆಯ ಕಚೇರಿಯಿಂದ ನೇರವಾಗಿ ಯಡಿಯೂರಪ್ಪ ವಿಮಾನ ನಿಲ್ದಾಣದ ಕಡೆ ಪ್ರಯಾಣ ಬೆಳೆಸಿದರು. ಯಡಿಯೂರಪ್ಪ ಮುಖ್ಯಮಂತ್ರಿಯಾದ 22 ದಿನಗಳ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ಪಕ್ಷದ ರಾಷ್ಟ್ರೀಯ ವರಿಷ್ಟರು ಒಪ್ಪಿಗೆ ನೀಡಿದ್ದಾರೆ. ಭಾನುವಾರ ಅಥವಾ ಸೋಮವಾರ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಅಮಿತ್ ಕಚೇರಿಯಿಂದ ಮುಖ್ಯಮಂತ್ರಿ ಅವರಿಗೆ ರವಾನೆ ಮಾಡಲಿದ್ದು, ಅದಕ್ಕಾಗಿ ತಯಾರಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಹೀಗಾಗಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದ್ದು, ಸಭೆಯ ಬಳಿಕ ನೂತನ ಸಚಿವರಿಗೆ ರಾಜ್ಯಪಾಲರು ಪ್ರಮಾಣ ವಚನ ಬೋಧಿಸಲಿದ್ದಾರೆ. ಯಡಿಯೂರಪ್ಪ ಅವರ ಸಚಿವ ಸಂಪುಟಕ್ಕೆ ಕನಿಷ್ಟ 15 ಜನ ಶಾಸಕರು ಸಚಿವರಾಗಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.