ಬೆಂಗಳೂರು, ಆ.20(Daijiworld News/SS): ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆಗೆ ಮಂಗಳವಾರ ಬೆಳಗ್ಗೆ 10.30ರಿಂದ 11.30ರವರೆಗೆ ಮುಹೂರ್ತ ನಿಗದಿಯಾಗಿದ್ದು, 17 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರೆ ಮಾಡಿ ನೂತನ ಸಚಿವರ ಪಟ್ಟಿ ನೀಡಿದ್ದು, ಅದರಂತೆ 17 ಮಂದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಚಿವರಾಗಲಿರುವ ಶಾಸಕರಿಗೆ ಸೋಮವಾರ ರಾತ್ರಿಯೇ ಮಾಹಿತಿ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿ 25 ದಿನಗಳ ಬಳಿಕ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಿದ್ದು, 17 ಶಾಸಕರು ಸಚಿವರಾಗಿ ಮಂಗಳವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಒಬ್ಬ ಪಕ್ಷೇತರ ಶಾಸಕರಿಗೂ ಸಚಿವರಾಗುವ ಭಾಗ್ಯ ಸಿಕ್ಕಿದೆ. ಬೆಳಿಗ್ಗೆ 10.30ಕ್ಕೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಿಗದಿಯಾಗಿದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ 26 ದಿನ ಕಳೆದ ಬಳಿಕ ಮಂಗಳವಾರ ಸಂಪುಟ ವಿಸ್ತರಣೆಯಾಗುತ್ತಿದೆ. ರಾಜ್ಯದ ಬಹಳಷ್ಟು ಜಿಲ್ಲೆಗಳಲ್ಲಿ ತೀವ್ರ ಪ್ರವಾಹ, ಭೂಕುಸಿತದಿಂದ ಲಕ್ಷಾಂತರ ಜನ ಸಂಕಷ್ಟಕ್ಕೆ ಸಿಲುಕಿದ್ದು, ಸಂಪುಟ ವಿಸ್ತರಣೆಯಾಗದಿರುವ ಬಗ್ಗೆ ಪ್ರತಿಪಕ್ಷಗಳಿಂದ ಆಕ್ಷೇಪ ವ್ಯಕ್ತವಾಗಿತ್ತು. ಇದೀಗ ಸಂಪುಟ ವಿಸ್ತರಣೆಗೆ ಸಮಯ ನಿಗದಿಯಾಗಿದೆ.
ಗೋವಿಂದ ಕಾರಜೋಳ, ಡಾ. ಅಶ್ವತ್ಥ್ ನಾರಾಯಣ, ಲಕ್ಷ್ಮಣ ಸವದಿ, ಕೆ. ಎಸ್. ಈಶ್ವರಪ್ಪ, ಆರ್. ಅಶೋಕ, ಬಿ. ಶ್ರೀರಾಮುಲು, ಎಸ್. ಸುರೇಶ್ ಕುಮಾರ್, ವಿ. ಸೋಮಣ್ಣ, ಸಿ. ಟಿ. ರವಿ, ಬಸವರಾಜ್ ಬೊಮ್ಮಾಯಿ, ಕೋಟಾ ಶ್ರೀನಿವಾಸ ಪೂಜಾರಿ, ಜೆ. ಸಿ. ಮಾಧುಸ್ವಾಮಿ, ಸಿ. ಸಿ. ಪಾಟೀಲ್, ಎಚ್. ನಾಗೇಶ್, ಪ್ರಭು ಚೌವಾಣ್, ಶಶಿಕಲಾ ಜೊಲ್ಲೆ, ಜಗದೀಶ್ ಶೆಟ್ಟರ್ ಸೇರಿದಂತೆ ಒಟ್ಟು 17 ಮಂದಿ ಶಾಸಕರು ಯಡಿಯೂರಪ್ಪ ಸಂಪುಟ ಸೇರಲಿದ್ದಾರೆ.