ಬೆಂಗಳೂರು, ಆ 20 (DaijiworldNews/SM): ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಂಸದ ನಳಿನ್ ಕುಮಾರ್ ಅವರನ್ನು ಆಯ್ಕೆಗೊಳಿಸಿ ರಾಷ್ಟ್ರಿಯ ಅಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.
ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಬಳಿಕ ಇದೀಗ ರಾಜ್ಯಾಧ್ಯಕ್ಷರು ಯಾರಾಗ್ತಾರೆ ಎಂಬ ಪ್ರಶ್ನೆ ಕಾಡಲಾರಂಭಿಸಿತ್ತು. ಆದರೆ ಇದಕ್ಕೆ ಇದೀಗ ಉತ್ತರ ಸಿಕ್ಕಂತಾಗಿದೆ. ದ.ಕ. ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಮೂಲಕ ಬಿಜೆಪಿ ಹೈ ಕಮಾಂಡ್ ಕರಾವಳಿ ಜನತೆಗೆ ಒಂದಿಷ್ಟು ಸಮಾಧಾನವಾಗುವಂತೆ ಮಾಡಿದೆ.
ಸಿ.ಟಿ. ರವಿ, ಅರವಿಂದ ಲಿಂಬಾವಳಿ, ಶ್ರೀರಾಮುಲು ಹೀಗೆ ಕೆಲವರ ಹೆಸರುಗಳು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಳಿಬಂದಿದ್ದವು. ಅವರೊಂದಿಗೆ ಸಂಸದ ನಳಿನ್ ಕುಮಾರ್ ಅವರ ಹೆಸರು ಕೂಡ ಕೇಳಿ ಬಂದಿತ್ತು. ಆದರೆ, ಇದೀಗ ಅಂತಿಮವಾಗಿ ನಳಿನ್ ಕುಮಾರ್ ಕಟೀಲ್ ಅವರಿಗೆ ಹೈಕಮಾಂಡ್ ಮಣೆ ಹಾಕಿದೆ.
ಕರಾವಳಿ ಭಾಗಕ್ಕೆ ಮಣೆ:
ಈಗಾಗಲೇ ಖಾತೆ ಹಂಚಿಕೆಯಲ್ಲಿ ಕರಾವಳಿ ಭಾಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿಲ್ಲ. ಹನ್ನೆರಡು ಮಂದಿ ಶಾಸಕರು ಬಿಜೆಪಿಯಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರೂ ಕೂಡ ಯಾರೊಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಬದಲಾಗಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದು ಕರಾವಳಿಯನ್ನು ಬಿಜೆಪಿ ಸರಕಾರ ನಿರ್ಲಕ್ಷಿಸಿದೆ ಎಂಬ ಆರೋಪಕ್ಕೆ ಗುರಿಯಾಗಿತ್ತು.
ಇದೇ ಕಾರಣದಿಂದಾಗಿ ಕರಾವಳಿ ಭಾಗಕ್ಕೆ ಪ್ರಾಶಸ್ತ್ರ್ಯ ನೀಡುವ ನಿಟ್ಟಿನಲ್ಲಿ ಹಾಗೂ ಸಂಸದರಿಗೆ ಹೆಚ್ಚಿನ ಜವಾಬ್ದಾರಿ ನೀಡುವ ಮೂಲಕ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ.