ಬೆಂಗಳೂರು, ಏ. 19 (DaijiworldNews/TA): ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಕುರಿತ ವಿವಾದ ಮತ್ತೊಂದು ಹಂತಕ್ಕೆ ತಲುಪಿದ್ದು, ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ.

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಪ್ರತ್ಯೇಕ ನಿಯಮಾವಳಿ ರೂಪಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿರುವ ಹಿನ್ನೆಲೆ, ಹೈಕೋರ್ಟ್ ತೀರ್ಪಿಗೆ ಸವಾಲು ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
ಕಳೆದ ವರ್ಷ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠವು ಬೈಕ್ ಟ್ಯಾಕ್ಸಿಗಳನ್ನು ಅನಧಿಕೃತವೆಂದು ಘೋಷಿಸಿ ರಾಜ್ಯದಲ್ಲಿ ನಿಷೇಧಿಸಿತ್ತು. ಆದರೆ 2026ರ ಜನವರಿ 23ರಂದು ದ್ವಿಸದಸ್ಯ ಪೀಠವು ಮಹತ್ವದ ತೀರ್ಪು ನೀಡಿ, ಬೈಕ್ ಟ್ಯಾಕ್ಸಿ ಅಗ್ರಿಗೇಟರ್ಗಳಿಗೆ ಪರವಾನಗಿ ನೀಡುವುದನ್ನು ಸರ್ಕಾರ ನಿರಾಕರಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು.
ಅಗ್ರಿಗೇಟರ್ ಸಂಸ್ಥೆಗಳು ಅರ್ಜಿ ಸಲ್ಲಿಸಿದರೆ, ಅವುಗಳನ್ನು ಪರಿಗಣಿಸಿ ಲೈಸೆನ್ಸ್ ನೀಡಬೇಕು ಎಂದು ಕೋರ್ಟ್ ನಿರ್ದೇಶಿಸಿತ್ತು. ಜೊತೆಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಯೆಲ್ಲೋ ಬೋರ್ಡ್ ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ಕಲ್ಪಿಸುವಂತೆ ಸೂಚಿಸಿತ್ತು. ಈ ತೀರ್ಪು ರಾಜ್ಯ ಸರ್ಕಾರದ ನಿಲುವಿಗೆ ವಿರುದ್ಧವಾಗಿರುವುದರಿಂದ, ಏಪ್ರಿಲ್ 23ರೊಳಗೆ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಯುತ್ತಿದೆ.
ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮ ಪ್ರತಿಕ್ರಿಯಿಸಿ, ಬೈಕ್ ಟ್ಯಾಕ್ಸಿ ವಿಚಾರದಲ್ಲಿ ಸರ್ಕಾರದ ನಿಲುವು ಸರಿಯಾಗಿದೆ ಎಂದು ಹೇಳಿದ್ದಾರೆ. ಕಾನೂನು ಸ್ಪಷ್ಟತೆ ಅಗತ್ಯವಿದ್ದು, ಈ ಹಿನ್ನೆಲೆ ಮೇಲ್ಮನವಿ ಸಲ್ಲಿಸುವುದು ಸೂಕ್ತ ಕ್ರಮ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಪ್ರಕರಣ ರಾಜ್ಯದಲ್ಲಿ ಸಾರಿಗೆ ನೀತಿ, ತಂತ್ರಜ್ಞಾನ ಆಧಾರಿತ ಸೇವೆಗಳು ಮತ್ತು ಕಾನೂನು ಚೌಕಟ್ಟಿನ ನಡುವೆ ನಡೆಯುತ್ತಿರುವ ಸಂಘರ್ಷವನ್ನು ಮತ್ತಷ್ಟು ತೀವ್ರಗೊಳಿಸಿದೆ.