ಬೆಂಗಳೂರು, ಏ. 24 (DaijiworldNews/AK): ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆ ಖಂಡನೀಯ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸ್ ಆಯುಕ್ತರನ್ನು ಇಂದು ಭೇಟಿ ಮಾಡಿ ತಪ್ಪಿತಸ್ಥರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಆರ್.ಅಶೋಕ್ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.
ವಿದ್ಯಾರ್ಥಿಗಳ ಧಾರ್ಮಿಕ ನಂಬಿಕೆ ಹಾಗೂ ಸಂಪ್ರದಾಯಗಳಿಗೆ ಧಕ್ಕೆ ತರುವ ಇಂತಹ ಘಟನೆಗಳು ಮರುಕಳಿಸಬಾರದು. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಒತ್ತಾಯಿಸಲಾಯಿತು.
ವರ್ಷಪೂರ್ತಿ ಪರಿಶ್ರಮಪಟ್ಟು ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಭಾವನೆಗಳಿಗೆ ಧಕ್ಕೆ ತರುವ ಘಟನೆಗಳಿಗೆ ತಕ್ಷಣ ಅಂತ್ಯವಾಗಬೇಕು. ಇಂತಹ ದೌರ್ಜನ್ಯ ಮತ್ತೆ ನಡೆಯದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಪೊಲೀಸ್ ಆಯುಕ್ತರ ಬೇಟಿ ಸಂಧರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಸಂತ್ರಸ್ತ ವಿದ್ಯಾರ್ಥಿ ಹಾಗೂ ಪೋಷಕರು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಪ್ರತಿನಿಧಿಗಳು ಉಪಸ್ಥಿತರಿದ್ದರು.