ಬೆಂಗಳೂರು, ಆ 22 (Daijiworld News/MSP): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೀನುಗಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೀನುಗಾರರಿಗೆ ನೀಡಲಾಗುವ ತೆರಿಗೆ ರಹಿತ ಡೀಸೆಲ್ ವಿತರಣೆಯ ಪ್ರಮಾಣವನ್ನು ಹೆಚ್ಚಿಸುವಂತೆ ಸೂಚನೆ ನೀಡಿದ್ದಾರೆ.
ಬುಧವಾರದಂದು ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕೋಟಾ ಶ್ರೀನಿವಾಸ ಪೂಜಾರಿ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿಯವರನ್ನು ಕೃಷ್ಣಾದಲ್ಲಿ ಭೇಟಿಯಾಗಿ ಕೆಲವೊಂದು ಬೇಡಿಕೆಗಳನ್ನು ಮುಂದಿಟ್ಟಿದ್ದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಮಲ್ಪೆ ಮೀನುಗಾರರ ನಿಯೋಗದ ಸದಸ್ಯರು ಹಾಜರಿದ್ದರು.
ಈ ನಿಯೋಗದ ಬೇಡಿಕೆಗೆ ತಕ್ಷಣವೇ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಯಾಂತ್ರೀಕೃತ ಮೀನುಗಾರಿಕಾ ದೋಣಿಗಳಿಗೆ ತೆರಿಗೆ ರಹಿತ ಡಿಸೇಲ್ ವಿತರಣೆಯನು ಈ ಹಿಂದಿನಂತೆ ನೀಡುವಂತೆ ಹಾಗೂ 400 ಲೀಟರ್ ಗಳಿಗೆ ಡೀಸೆಲ್ ಪ್ರಮಾಣವನ್ನು ಹೆಚ್ಚಿಸುವಂತೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಈ ಸಂದರ್ಭ ಸೂಚಿಸಿದ್ದಾರೆ.