ಬೆಂಗಳೂರು, ಆ.23(Daijiworld News/SS): ನಾನು ಯಾವತ್ತೂ ಅಧಿಕಾರದ ಹಿಂದೆ ಬಿದ್ದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುವುದನ್ನು ಸಹಿಸಿಕೊಳ್ಳಲಾರದೆ ಸಿದ್ದರಾಮಯ್ಯ ಸರ್ಕಾರ ಬೀಳಿಸಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಆರೋಪಿಸಿದ್ದರು. ಇದೀಗ ಈ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ಅವರು, ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ರೇವಣ್ಣ, ಕುಮಾರಸ್ವಾಮಿಯೇ ಕಾರಣ. ಮೈತ್ರಿ ಸರ್ಕಾರ ಪತನಕ್ಕೆ ದಳಪತಿಗಳೇ ಕಾರಣ ವಿನಃ, ನಾವಲ್ಲ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶದ ಸ್ವಾಯತ್ತೆ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ನಾವೆಲ್ಲ ಒಗ್ಗಟ್ಟಾಗಿ ಹೋರಾಡಬೇಕು ಎಂಬ ದೃಷ್ಟಿಯಲ್ಲಿ ಸರ್ಕಾರ ರಚನೆಗೆ ಒಪ್ಪಿದ್ದೆ. ಆದರೆ ನಾನೇನು ಕುಮಾರಸ್ವಾಮಿ ಸಿಎಂ ಆಗಬಾರದು ಎಂದು ಭಾವಿಸಿಲ್ಲ. ನಾನು 14 ತಿಂಗಳ ಕಾಲ ಸಂಪೂರ್ಣ ಸಹಕಾರ ನೀಡಿದ್ದೆ ಎಂದು ಹೇಳಿದರು.
ಕುಮಾರಸ್ವಾಮಿ ಅವರ ಏಕಪಕ್ಷೀಯ ನಿರ್ಧಾರ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರುವುದು ಸರಕಾರ ಪತನಕ್ಕೆ ಕಾರಣವಾಯಿತು. ನಮ್ಮ ಸರ್ಕಾರ ಉಳಿಯಬೇಕು ಎಂದು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದೇವೆ. ಇವರ ಉದ್ದೇಶ ನನಗೆ ಗೊತ್ತಿಲ್ಲ. ನನ್ನ ಮೇಲೆ ಆರೋಪ ಮಾಡಿ ಯಾವ ಪಕ್ಷವನ್ನು ಖುಷಿಪಡಿಸಲು ಹೊರಟಿದ್ದಾರೋ ಎಂದು ವಾಗ್ದಾಳಿ ನಡೆಸಿದರು.
ದೇವೇಗೌಡರ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದದ್ದು. ರಾಜಕೀಯ ದುರುದ್ದೇಶದಿಂದ ಮಾಡಿರುವಂತಹ ಸುಳ್ಳು ಆರೋಪವಾಗಿದೆ. ನಾನು ಯಾವತ್ತೂ ಅಧಿಕಾರದ ಹಿಂದೆ ಬಿದ್ದಿಲ್ಲ ಎಂದು ಹೇಳಿದರು.