ನವದೆಹಲಿ, ಆ.23(Daijiworld News/SS): ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜಸ್ಥಾನದ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಸಭೆ ಸದಸ್ಯ ಮತ್ತು ರಾಜಸ್ಥಾನದ ಬಿಜೆಪಿ ಘಟಕದ ಅಧ್ಯಕ್ಷ ಮದನ್ ಲಾಲ್ ಸೈನಿ ಜೂನ್ 24 ರಂದು ಮೃತಪಟ್ಟಿದ್ದರು. ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. ಕಾಂಗ್ರೆಸ್ನಿಂದ ಮನಮೋಹನ್ ಸಿಂಗ್ ಆ. 13 ರಂದು ನಾಮಪತ್ರ ಸಲ್ಲಿಸಿದ್ದರು. ಪ್ರತಿಪಕ್ಷ ಬಿಜೆಪಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಮನಮೋಹನ್ ಸಿಂಗ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.
ಪ್ರಮಾಣ ವಚನ ಸ್ವೀಕಾರದ ವೇಳೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಮತ್ತು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಉಪಸ್ಥಿತರಿದ್ದರು.