ನವದೆಹಲಿ ಆ 25 (Daijiworld News/RD): ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಹಾಗೂ ಪಕ್ಷದ ಕಾರ್ಯಕರ್ತರು ಸೇರಿ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯನ್ನು ಅರಿತುಕೊಳ್ಳುವ ನಿಟ್ಟಿನಲ್ಲಿ ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಆದರೆ ಸರ್ಕಾರ ವಾಪಸ್ ಕಳುಹಿಸಿದೆ. ವಾಪಸ್ ಬರುವ ವೇಳೆ ವಿಮಾನದಲ್ಲಿ ಕಾಶ್ಮೀರಿ ಮಹಿಳೆ ತನ್ನ ನೋವನ್ನು ಹೇಳಿಕೊಂಡಿದ್ದಾಳೆ. ಇದೀಗ ಈ ವಿಡಿಯೋ ವೈರಲ್ ಆಗಿದೆ.
ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನುರದ್ದುಗೊಳಿಸಿದ ನಂತರ ಅಲ್ಲಿ ಯಾವ ಸ್ಥಿತಿ ನಿರ್ಮಾಣವಾಗಿದೆ ಮತ್ತು ಜನ ಹೇಗೆ ಬದುಕುತ್ತಿದ್ದಾರೆ ಎಂಬಿತ್ಯಾದಿ ಪ್ರಶ್ನೆಗಳಿಗೆ ಈ ಮಹಿಳೆ ಉತ್ತರ ನೀಡಿದ್ದಾಳೆ. ನಮ್ಮ ಮಕ್ಕಳು ಮನೆಯಿಂದ ಹೊರಗೆ ಬರಲು ಸಾಧ್ಯವಾಗುತ್ತಿಲ್ಲ. ನನ್ನ ಸಹೋದರ ಹೃದಯ ರೋಗಿಯಾಗಿದ್ದು, ಕಳೆದ 10 ದಿನಗಳಿಂದ ಆತನಿಗೆ ಚಿಕಿತ್ಸೆ ಕೊಡಿಸಲು ಸಾಧ್ಯವಾಗುತ್ತಿಲ್ಲ. ನಾವು ತುಂಬಾ ಸಮಸ್ಯೆಯಲ್ಲಿ ಸಿಲುಕಿದ್ದೇವೆ ಎಂದು ಕಾಶ್ಮೀರಿ ಮಹಿಳೆ ರಾಹುಲ್ ಗಾಂಧಿ ಮುಂದೆ ತನ್ನ ದುಃಖವನ್ನು ಹೇಳಿಕೊಂಡಿದ್ದಾಳೆ.
ಈ ವಿಡಿಯೋವನ್ನು ಕಾಂಗ್ರೆಸ್ ವಕ್ತಾರೆ ರಾಧಿಕಾ ಖೇರ್ ಟ್ವಿಟ್ಟರ್ ನಲ್ಲಿ ಷೇರ್ ಮಾಡಿದ್ದು, ಕಾಂಗ್ರೆಸ್ ನಾಯಕರಾದ ಗುಲಾಮ್ ನಬಿ ಆಜಾದ್, ಆನಂದ್ ಶರ್ಮಾ ಹಾಗೂ ಕೆ ಸಿ ವೇಣುಗೋಪಾಲ್ ಅವರು ಸಮಾಧಾನದಿಂದ ಆಲಿಸುತ್ತಿದ್ದರು. ರಾಹುಲ್ ಗಾಂಧಿ ನೇತೃತ್ವದಲ್ಲಿ 12 ಪ್ರತಿಪಕ್ಷಗಳ ನಾಯಕರ ನಿಯೋಗವು ಇಂದು ಜಮ್ಮು ಮತ್ತು ಕಾಶ್ಮೀರ ಭೇಟಿಗಾಗಿ ಶ್ರೀನಗರಕ್ಕೆ ತೆರಳಿತ್ತು. ಆದರೆ ಅವರನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲಿಯೇ ತಡೆದ ಭದ್ರತಾ ಸಿಬ್ಬಂದಿ, ಅವರನ್ನು ವಾಪಸ್ ದೆಹಲಿಗೆ ಕಳುಹಿಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಈ ರೀತಿಯ ನಡವಳಿಕೆಗೆ ಆಕ್ರೋಶಗೊಂಡು ರಾಹುಲ್ ಗಾಂಧಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲಾ ರೀತಿಯ ಭದ್ರತೆಯನ್ನು ಒದಗಿಸಿದ್ದೇವೆ, ಎಲ್ಲವೂ ಸರಿ ಇದೆ ಎಂದು ಹೇಳುತ್ತಾ ಕೇಂದ್ರ ಸರ್ಕಾರ ಸತ್ಯವನ್ನು ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ, ಅಲ್ಲಿನ ಜನರೂ ತುಂಬಾ ಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಬಿಜೆಪಿ ಸರ್ಕಾರ ಪ್ರತಿಪಕ್ಷ ನಿಯೋಗಕ್ಕೆ ಅವಕಾಶ ಕಲ್ಪಿಸದೇ ಏನನ್ನೊ ಮುಚ್ಚಿಡುತ್ತಿದೆ? ಎಂದು ಹೇಳಿದ್ದಾರೆ.