ನವದೆಹಲಿ,ಆ 25 (Daijiworld News/RD): ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ, ಕೆಲವು ನಿರ್ಬಂಧಗಳನ್ನು ವಿಧಿಸಿರುವ ಕೇಂದ್ರ ಸರ್ಕಾರ ರಾಷ್ಟ್ರೀಯತೆ ಹೆಸರಿನಲ್ಲಿ ಕಾಶ್ಮೀರದ ಪ್ರಜೆಗಳ ಹಕ್ಕು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ, ಇದು ಕೂಡ ದೇಶದ್ರೋಹದ ಕೃತ್ಯ. ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಶ್ಮೀರ ಭೇಟಿಗೆ ತೆರಳಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಪ್ರತಿಪಕ್ಷಗಳ ನಾಯಕರನ್ನು ಶ್ರೀನಗರ ವಿಮಾನ ನಿಲ್ದಾಣದಿಂದ ವಾಪಸ್ ಕಳುಹಿಸಿದ್ದು, ಅಲ್ಲದೆ ನಿನ್ನೆ ವಿಮಾನದಲ್ಲಿ ರಾಹುಲ್ ಗಾಂಧಿ ಮುಂದೆ ಕಾಶ್ಮೀರಿ ಮಹಿಳೆ ತನ್ನ ಅಳಲು ತೋಡಿಕೊಳ್ಳುತ್ತಿರುವ ವಿಡಿಯೋವನ್ನು ರೀ ಟ್ವೀಟ್ ಮಾಡಿದ ಪ್ರಿಯಾಂಕಾ ಗಾಂಧಿ, ರಾಷ್ಟ್ರೀಯತೆಯ ಹೆಸರಿನಲ್ಲಿ ಕಾಶ್ಮೀರಿಗಳ ಮೌನ ಹಾಗೂ ರಾಷ್ಟ್ರೀಯತೆಯ ಹೆಸರಿನಲ್ಲಿ ಮೂಲೆಗುಂಪು ಮಾಡಿರುವ ಲಕ್ಷಾಂತರ ಜನರ ಪೈಕಿ ಇದು ಒಂದು ಉದಾಹರಣೆ ಎಂದು ಹೇಳಿ, ಇದು ಇನ್ನೆಷ್ಟು ದಿನ ಮುಂದುವರೆಯುತ್ತದೆ? ಎಂದು ಕಿಡಿಕಾರಿದ್ದಾರೆ.
ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರಜಾಪ್ರಭುತ್ವ ಹಕ್ಕುಗಳ ಕಗ್ಗೊಲೆ ರಾಜಕೀಯ ಹಾಗೂ ರಾಷ್ಟ್ರ ವಿರೋಧಿ ಕೃತ್ಯಕ್ಕಿಂತ ದೊಡ್ಡದು ಮತ್ತೊಂದು ಇಲ್ಲ. ಇದರ ವಿರುದ್ಧ ಧ್ವನಿ ಎತ್ತುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.