ಹುಬ್ಬಳ್ಳಿ, ಆ 27 (DaijiworldNews/SM): ಉಪ ಮುಖ್ಯಮಂತ್ರಿ ಸ್ಥಾನ ಎನ್ನುವುದು ಸಾಂವಿಧಾನಿಕ ಹುದ್ದೆಯಲ್ಲ. ಬದಲಿಗೆ ಅಸಂವಿಧಾನಿಕ. ಅದಕ್ಕೆ ಸಂವಿಧಾನದಲ್ಲಿ ಯಾವುದೇ ಮಾನ್ಯತೆ ಇಲ್ಲ. ಕೇವಲ ಗೌರವ ನೀಡುವ ಉದ್ದೇಶದಿಂದ ಸೃಷ್ಟಿಯಾಗಿರುವ ಹುದ್ದೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಹುದ್ದಗೆ ಯಾವುದೇ ಮಹತ್ವವಿಲ್ಲ. ಕೇವಲ ಗೌರವ ಮಾತ್ರ. ನನಗೆ ಆ ಹುದ್ದೆ ನೀಡಿದ್ದರೂ ನಾನು ತಿರಸ್ಕರಿಸುತ್ತಿದ್ದೆ ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಪಕ್ಷದಲ್ಲಿರುವ ಸಂದರ್ಭದಲ್ಲಿ ಪಕ್ಷದ ಹಿರಿಯರು ಕೈಗೊಳ್ಳುವ ನಿರ್ಧಾರ ಅಂತಿಮವಾಗಿದೆ. ಅದಕ್ಕೆ ನಾವು ಬದ್ದರಾಗಿರುತ್ತೇವೆ. ಏನೇ ಗೊಂದಲಗಳಿದ್ದರೂ ಅವುಗಳನ್ನು ಪಕ್ಷದೊಳಗೆ ಸರಿಪಡಿಸಿಕೊಳ್ಳುತ್ತೇವೆ. ಮೂರು ನಾಲ್ಕು ದಿನಗಳಲ್ಲಿ ಎಲ್ಲಾ ಗೊಂದಲಗಳು ಸರಿಯಾಗಲಿವೆ ಎಂದು ಅವರು ತಿಳಿಸಿದ್ದಾರೆ.