ಬೆಂಗಳೂರು, ಸೆ 1 (Daijiworld News/RD): ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಎರಡನೇ ದಿನದ ಇಡಿ ವಿಚಾರಣೆ ಅಂತ್ಯಗೊಂಡಿದೆ. ಸುಮಾರು 28 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆದಿದ್ದು, ಸೋಮವಾರವೂ ಮುಂದುವರೆಯಲಿದೆ ಎಂದು ಮೂಲಗಳು ತಿಳಿಸಿವೆ.
ವಿಚಾರಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಸೋಮವಾರವೂ ವಿಚಾರಣೆ ಮುಂದುವರೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ಮತ್ತೆ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಲಾಗಿದೆ. ಹಬ್ಬ ಇದೆ ಎಂದರೂ ಸೋಮವಾರ ಬರಬೇಕೆಂದು ಸೂಚಿಸಿದ್ದಾರೆ ಎಂದು ತಿಳಿಸಿದರು.
2017ರ ಆಗಸ್ಟ್ 2 ರಂದು ದೆಹಲಿಯ ಡಿಕೆ ಶಿವಕುಮಾರ್ ಆಪ್ತರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದಾಗ ದಾಖಲೆ ಇಲ್ಲದ ಸುಮಾರು 8.59 ಕೋಟಿ ರೂ. ಹಣ ಪತ್ತೆಯಾಗಿತ್ತು. ಅಕ್ರಮ ನಗದು ಹಣ ಸೇರಿದಂತೆ ಕೆಲವಾರು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರು ಬಂಧನ ಭೀತಿ ಎದುರಿಸುತ್ತಿದ್ದಾರೆ. ಇಡಿ ಸಮನ್ಸ್ ಕ್ರಮವನ್ನು ಪ್ರಶ್ನಿಸಿ ನಿನ್ನೆ ದೆಹಲಿ ಹೈಕೋರ್ಟ್ನಲ್ಲಿ ಡಿಕೆಶಿ ಅವರು ಸಲ್ಲಿಸಿದ್ದ ಅರ್ಜಿ ವಜಾಗೊಂಡಿತು. ಅದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯವು ನಿನ್ನೆ ರಾತ್ರಿ ಹೊಸ ಸಮನ್ಸ್ ಕಳುಹಿಸಿ ಶುಕ್ರವಾರ ಮಧ್ಯಾಹ್ನ ವಿಚಾರಣೆಗೆ ದೆಹಲಿಗೆ ಬರುವಂತೆ ಸೂಚಿಸಿತು. ಇವತ್ತು ಅವರು ಸಲ್ಲಿಸಿದ್ದ ನಿರೀಕ್ಷಣಾ ಮಧ್ಯಂತರ ಜಾಮೀನು ಅರ್ಜಿಯನ್ನೂ ಹೈಕೋರ್ಟ್ ತಿರಸ್ಕರಿಸಿತು.