ಭುವನೇಶ್ವರ,ಜೂ. 13 (DaijiworldNews/AK): ಸರ್ಕಾರಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಇನ್ಮುಂದೆ ಯಾವುದೇ ಶುಲ್ಕ ಇರುವುದಿಲ್ಲ. ಕಿಂಡರ್ಗಾರ್ಟನ್ನಿಂದ ಸ್ನಾತಕೋತ್ತರ ಪದವಿವರೆಗೆ ಉಚಿತ ಶಿಕ್ಷಣ ನೀಡುವುದಾಗಿ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಘೋಷಿಸಿದ್ದಾರೆ.

ಶಿಕ್ಷಣವನ್ನು ಉಚಿತ ಮತ್ತು ಸಾರ್ವತ್ರಿಕಗೊಳಿಸುವುದಾಗಿ ಘೋಷಿಸಿರುವ ಮುಖ್ಯಮಂತ್ರಿಗಳು, ಇಡೀ ದೇಶದಲ್ಲೇ ಇಂತಹದ್ದೊಂದು ಮಹತ್ವದ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೊಳಿಸಿದ ಮೊದಲ ರಾಜ್ಯ ಒಡಿಶಾವಾಗಿದೆ. ಈ ಯೋಜನೆ ಪ್ರಮುಖವಾಗಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ವಿದ್ಯಾಭ್ಯಾಸದಲ್ಲಿ ಸಂಶೋಧನೆಯ ಗುರಿ ಇಟ್ಟುಕೊಂಡವರಿಗೆ ವರದಾನವಾಗಲಿದೆ ಎಂದು ತಿಳಿಸಿದ್ದಾರೆ.
ಸರ್ಕಾರದ ಈ ಮಹತ್ವದ ನಿರ್ಧಾರದಿಂದಾಗಿ ರಾಜ್ಯದ 10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಲಾಭವಾಗಲಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಒಡಿಶಾದಲ್ಲಿ ಈಗಾಗಲೇ 10ನೇ ತರಗತಿಯವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿತ್ತು. ಇದೀಗ ಅದನ್ನು ಉನ್ನತ ಶಿಕ್ಷಣಕ್ಕೂ ವಿಸ್ತರಿಸಿರುವುದರಿಂದ, ಆರ್ಥಿಕ ಸಂಕಷ್ಟದಿಂದ ಉನ್ನತ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದ ವಿದ್ಯಾರ್ಥಿಗಳಿಗೆ ಸರ್ಕಾರದ ಈ ಯೋಜನೆ ನೆರವಾಗಲಿದೆ.
ಸರ್ಕಾರಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಶುಲ್ಕ ಕಡಿಮೆ ಇದ್ದರೂ, ಈಗ ಅದನ್ನು ಸಂಪೂರ್ಣ ಉಚಿತ ಮಾಡಿರುವುದರಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ ಸುಮಾರು 30 ಕೋಟಿ ರೂ.ಗಳ ಹೆಚ್ಚುವರಿ ಹೊರೆ ಬೀಳಲಿದೆ ಎಂದು ಅಂದಾಜಿಸಲಾಗಿದೆ.